ಪೆರ್ಲ: ನಾಲಂದ ಕಾಲೇಜಿನಲ್ಲಿ ಭವ್ಯವಾಗಿ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾಲೇಜಿನ ನೂತನ ವಿದ್ಯಾರ್ಥಿಗಳನ್ನು ಹಾರ್ದಿಕವಾಗಿ ಸ್ವಾಗತಿಸುವ ನಿಟ್ಟಿನಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಡಾ. ಜಯಗೋವಿಂದ ಉಕ್ಕಿನಡ್ಕ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ “ಶಿಕ್ಷಣವು ಕೇವಲ ಜ್ಞಾನ ನೀಡುವುದಲ್ಲ, ಅದು ವ್ಯಕ್ತಿತ್ವ ವಿಕಸನ ಮತ್ತು ನಾಯಕತ್ವ ಗುಣ ಬೆಳೆಸುವ ಮಹತ್ವದ ಶಕ್ತಿಯಾಗಿದೆ” ಎಂದು ಹೇಳಿದರು. ಅವರು ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸವನ್ನು ಕೇವಲ ಅಂಕಗಳಿಗೆ ಸೀಮಿತಗೊಳಿಸದೆ, ಸಮಾಜಮುಖಿ ಕಾರ್ಯಗಳಲ್ಲಿ ಸಕ್ರಿಯರಾಗಿರಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮಕ್ಕೆ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರು ಶಂಕರ ಖಂಡಿಗೆ ಅವರು ವಿದ್ಯಾರ್ಥಿಗಳಿಗೆ ಹಾರ್ದಿಕ ಸ್ವಾಗತ ಕೋರಿದರು ಮತ್ತು ಭವಿಷ್ಯದಲ್ಲಿ ಉತ್ತಮ ಸಾಧನೆ ಮಾಡುವಂತೆ ಪ್ರೋತ್ಸಾಹಿಸಿದರು.
ಈ ಸಂದರ್ಭದಲ್ಲಿ 2024- 25ನೇ ಶೈಕ್ಷಣಿಕ ವರ್ಷದಲ್ಲಿ ಕಣ್ಣೂರು ವಿಶ್ವವಿದ್ಯಾಲಯ ಪರೀಕ್ಷೆಯಲ್ಲಿ ಬಿಎಸ್ಸಿ ಜಿಯಾಗ್ರಫಿಯಲ್ಲಿ ಪ್ರಥಮ ರಾಂಕ್ ಪಡೆದ ಗಾನಸಮೃದ್ಧಿ, ಬಿಕಾಂ ಫೈನಾನ್ಸ್ನಲ್ಲಿ ಅತ್ಯಧಿಕ ಅಂಕ ಪಡೆದ ಕು. ಅರ್ಚನಾ, ಬಿಕಾಂ ಕೋ- ಓಪರೇಶನ್ನಲ್ಲಿ ಅತ್ಯಧಿಕ ಅಂಕ ಪಡೆದ ತೃಪ್ತಿ, ಬಿಎಯಲ್ಲಿ ಅತ್ಯಧಿಕ ಅಂಕ ಪಡೆದ ಜಗನ್ ಮತ್ತು ಕಣ್ಣೂರು ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ಸ್ನಾತಕೋತ್ತರ ವಿಭಾಗದಲ್ಲಿ ಪ್ರಥಮ ರಾಂಕ್ ಪಡೆದ ಕು. ಸ್ವಾತಿ, ಇವರನ್ನು ಗೌರವಿಸಲಾಯಿತು. ಪ್ರಸ್ತುತ ಕು. ಸ್ವಾತಿ ಇವರು ಕಾಲೇಜಿನಲ್ಲಿ ಅರ್ಥಶಾಸ್ತ್ರ ವಿಭಾಗದಲ್ಲಿ ಉಪನ್ಯಾಸಕಿ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.
ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಂದ ನೃತ್ಯ, ಹಾಡು, ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಕಾಲೇಜಿನ ಸಿಬ್ಬಂದಿ, ಹಿರಿಯ ವಿದ್ಯಾರ್ಥಿಗಳು ಹಾಗೂ ನೂತನ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

0 Comments