ವ್ಯಕ್ತಿಯೊಬ್ಬರು ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಪುತ್ತೂರಿನ 5ನೇ ಹೆಚ್ಚುವರಿ ನ್ಯಾಯಾಲಯದಲ್ಲಿ ನಡೆದಿದೆ. ಕಾವು ಮಣಿಯಡ್ಕ ನಿವಾಸಿ, ರವಿ (35) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಎರಡು ದಿನಗಳ ಹಿಂದೆ ಪತ್ನಿಯ ಕುತ್ತಿಗೆ ಹಿಸುಕಿ ಹತ್ಯೆಗೆ ಯತ್ನಿಸಿದ್ದರು ಎಂಬ ಆರೋಪ ಕೇಳಿಬಂದಿದೆ. ಗಂಡ-ಹೆಂಡತಿಯ ಈ ಜಗಳ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ಇಂದು ಕೇಸ್ ದಾಖಲಾಗುವ ಸಾಧ್ಯತೆ ಇತ್ತು. ಹಾಗಾಗಿ ಇಬ್ಬರ ನಡುವೆ ವಿಚ್ಛೇದನದ ಮಾತುಕತೆ ನಡೆದಿತ್ತು. ಸಂಪ್ಯ ಠಾಣೆಗೆ ಹಾಜರಾಗಲು ಇಂದು ರವಿಗೆ ಪೊಲೀಸರು ಸೂಚಿಸಿದ್ದರು. ಆದರೆ, ನೇರವಾಗಿ ಪುತ್ತೂರು ನ್ಯಾಯಾಲಯದ ಆವರಣಕ್ಕೆ ಬಂದ ರವಿ, ಜಡ್ಜ್ ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗೇರು ತೋಟಕ್ಕೆ ಸಿಂಪಡಿಸುವ ಕೀಟನಾಶಕವನ್ನ ಸೇವಿಸಿದ್ದ ರವಿ ನ್ಯಾಯಾಲಯದಲ್ಲಿಯೇ ವಾಂತಿ ಮಾಡಿಕೊಂಡಿದ್ದಾರೆ. ತಕ್ಷಣ ಅಲ್ಲಿಯವರು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಿದರು. ಹೆಚ್ಚಿನ ಚಿಕಿತ್ಸೆಗೆ ಪುತ್ತೂರಿನಿಂದ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ. ಈ ಬೆಳವಣಿಗೆಯ ಬಳಿಕ ದಂಪತಿ ಒಂದಾಗಿದ್ದಾರೆ. ಮಂಗಳೂರು ಆಸ್ಪತ್ರೆಗೆ ಸಾಗಿಸುವ ವೇಳೆ ಒಂದೇ ಆಂಬ್ಯುಲೆನ್ಸ್ ನಲ್ಲಿ ದಂಪತಿ ತೆರಳಿದ್ದಾರೆಂದು ತಿಳಿದುಬಂದಿದೆ. ಎಂಡೋಸಲ್ಫಾನ್ ಬ್ಯಾನ್ ಆದ ಬಳಿಕ ಮಾರುಕಟ್ಟೆಯಲ್ಲಿ ಸಿಗುವ ಕರಾಟೆ ಕೀಟನಾಶಕವನ್ನು ರವಿ ಸೇವಿಸಿದ್ದಾರೆಂದು ತಿಳಿದುಬಂದಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

0 Comments