Ticker

6/recent/ticker-posts

Ad Code

ಉಡುಪಿಯಲ್ಲಿ ಶೀರೂರು ಮಠಾಧೀಶ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯ ಮಹೋತ್ಸವದ ಸಂಭ್ರಮ

ಉಡುಪಿ : ಶೀರೂರು ಮಠಾಧೀಶ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯ ಮಹೋತ್ಸವಕ್ಕೆ ಸಿದ್ಧತೆಗಳು ನಡೆದಿದ್ದು, ಕ್ಷಣ ಗಣನೆ ಆರಂಭವಾಗಿದೆ. ಭಕ್ತರ ಸ್ವಾಗತಕ್ಕೆ ಉಡುಪಿ ನಗರ ಸಜ್ಜಾಗಿದೆ. ನಗರಸಭೆಯ ವತಿಯಿಂದ  ಕಣ್ಮನ ಸೆಳೆಯುವ ವಿದ್ಯುತ್‌ ದೀಪಾಲಂಕಾರ  ಮಾಡಲಾಗಿದ್ದು, ರಾತ್ರಿ ವೇಳೆ ನಗರವು ಕಂಗೊಳಿಸುತ್ತಿದೆ. ಜ.17 ರಂದು ರಾತ್ರಿ 2 ಗಂಟೆಯಿಂದ ಇಲ್ಲಿನ ಜೋಡುಕಟ್ಟೆಯಿಂದ ಶ್ರೀಕೃಷ್ಣಮಠದವರೆಗೆ 85ಕ್ಕೂ ಅಧಿಕ ಕಲಾ ತಂಡಗಳು, ಸ್ತಬ್ಧ ಚಿತ್ರಗಳಿರುವ ಪರ್ಯಾಯ ಮೆರವಣಿಗೆ ನಡೆಯಲಿದೆ. 18ರಂದು ಬೆಳಿಗ್ಗೆ 5.55ಕ್ಕೆ ಕೃಷ್ಣಮಠದ ಬಡಗು ಮಾಳಿಗೆಯ ಅರಳು ಗದ್ದುಗೆಯಲ್ಲಿ ಸಾಂಪ್ರದಾಯಿಕ ದರ್ಬಾರ್ ಹಾಗೂ ಅಷ್ಟ ಮಠಾಧೀಶರಿಗೆ ಮಾಲಿಕೆ ಮಂಗಳಾರತಿ ಜರುಗಲಿದೆ. ಬೆಳಿಗ್ಗೆ 6ಗಂಟೆಗೆ ರಾಜಾಂಗಣದಲ್ಲಿ ಪರ್ಯಾಯ ದರ್ಬಾರ್ ಸಭೆ ನಡೆಯಲಿದೆ. ವಿವಿಧ ಮಠಾಧೀಶರು, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ, ಬಿಜೆಪಿ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪಾಲ್ಗೊಳ್ಳುವರು. ಎರಡು ಲಕ್ಷಕ್ಕೂ ಅಧಿಕ ಭಕ್ತರು ಪರ್ಯಾಯ ಮಹೋತ್ಸವದಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ.

ಪರ್ಯಾಯ ಮಹೋತ್ಸವವನ್ನು ಯಶಸ್ವಿಯಾಗಿ ಪೂರೈಸಿದ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹಾಗೂ ಕಿರಿಯ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರನ್ನು ಶೀರೂರು ಪರ್ಯಾಯ ಸ್ವಾಗತ ಸಮಿತಿಯಿಂದ ಜ.17ರಂದು ಸನ್ಮಾನಿಸಲಾಗುವುದು. ಪರ್ಯಾಯ ದರ್ಬಾರ್ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಶೀರೂರು ಶ್ರೀಪಾದರು ಶ್ರೀ ಕೃಷ್ಣಾನುಗ್ರಹ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಿದ್ದಾರೆ ಎಂದು ಸಂಬಂಧಪಟ್ಟವರು ತಿಳಿಸಿದ್ದಾರೆ.

Post a Comment

0 Comments