ಮಂಗಳೂರು : ಕರ್ತವ್ಯ ನಿರ್ವಹಿಸುತ್ತಿದ್ದ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗೆ ಅತಿವೇಗದಿಂದ ಬಂದ   ಕಾರು ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳೂರಿನ ಮಣ್ಣಗುಡ್ಡದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ KA-19 MP-9623 ಸಂಖ್ಯೆಯ  ಕಾರು ಚಲಾಯಿಸುತ್ತಿದ್ದ ಯಕ್ಷಗಾನ ಕಲಾವಿದ ಧೀರಜ್ ರೈ ವಿರುದ್ಧ ಪ್ರಕರಣ ದಾಖಲಾಗಿದೆ.

ಮಂಗಳೂರು ನಗರ ಸಂಚಾರ ಪಶ್ಚಿಮ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ವಿಠ್ಠಲ್ ದಾಸ್ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಕುಮಾರ ಅವರು ರಾತ್ರಿ ಕರ್ತವ್ಯದಲ್ಲಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಹೆಡ್ ಕಾನ್ಸ್ಟೇಬಲ್ ವಿಠ್ಠಲ್ ದಾಸ್ ಅವರು ನೆಲಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಆಟೋ ಮೂಲಕ ಕೆಎಂಸಿ ಆಸ್ಪತ್ರೆ ಅತ್ತಾವರದಲ್ಲಿ ದಾಖಲಿಸಲಾಯಿತು. ಮತ್ತೋರ್ವ ಸಿಬ್ಬಂದಿ ಕುಮಾರ್ ಅವರಿಗೂ ಗಾಯಗಳಾಗಿವೆ. ಇಬ್ಬರಿಗೂ ಚಿಕಿತ್ಸೆ ನೀಡಲಾಗುತ್ತಿದೆ.

ಮಣ್ಣಗುಡ್ಡದಲ್ಲಿ ಇರಡು ಬೈಕ್‌ಗಳ ನಡುವೆ ಸಂಭವಿಸಿದ್ದ ಅಪಘಾತದ ತನಿಖೆಗಾಗಿ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದರು. ತನಿಖೆ ಪೂರ್ಣಗೊಳಿಸಿದ ಬಳಿಕ ಪೇದೆ ವಿಠಲ್ ಗೌಡ ಠಾಣೆಗೆ ತೆರಳಲು ಬೈಕ್ ಏರುತ್ತಿದ್ದ ವೇಳೆ ಕಾರು ಬಂದು ಡಿಕ್ಕಿ ಹೊಡೆದಿದೆ. ಘಟನೆಯ ದೃಶ್ಯ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಅಪಘಾತದ ತೀವ್ರತೆ ಸ್ಪಷ್ಟವಾಗಿ ಗೋಚರಿಸಿದೆ. ಕಾರು ಚಾಲನೆ ಮಾಡುತ್ತಿದ್ದ ಯಕ್ಷಗಾನ ಕಲಾವಿದ ಧೀರಜ್ ರೈ ಮದ್ಯಪಾನ ಮಾಡಿ ಕಾರು ಚಲಾಯಿಸುತ್ತಿದ್ದರು ಎಂಬ ಆರೋಪವೂ ಕೇಳಿಬಂದಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.