ಮಂಗಳೂರು : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ಅಂಡಮಾನ್-ನಿಕೋಬಾರ್ ದ್ವೀಪ ಪ್ರದೇಶದಲ್ಲಿನ ಮೋಡಗಳ ಚಲನೆಯಿಂದಾಗಿ ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯಾದ್ಯಂತ ಮಳೆ ಮತ್ತಷ್ಟು ಬಿರುಸಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಕಾಸರಗೋಡು, ದ.ಕ. ಉಡುಪಿ, ಯಾದಗಿರಿ, ಹಾವೇರಿ, ಕೊಡಗು, ಶಿವಮೊಗ್ಗ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಲಿದೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಳೆಯ ತೀವ್ರತೆಯಿಂದಾಗಿ ರನ್-ವೇ ಸ್ಪಷ್ಟವಾಗಿ ಕಾಣಿಸದ ಕಾರಣ ಎರಡು ವಿಮಾನಗಳ ಹಾರಾಟದಲ್ಲಿ ವಿಳಂಬವಾಯಿತು. ಮಂಗಳೂರು ಹಾಗೂ ಮೈಸೂರು ನಗರಗಳಲ್ಲಿ ಸುರಿದ ಮಳೆಯಿಂದಾಗಿ ವಾಹನ ಸವಾರರು ತೀವ್ರ ಪರದಾಡುವಂತಾಯಿತು.
ಹವಾಮಾನ ಇಲಾಖೆಯು ಮುಂದಿನ ನಾಲ್ಕು ದಿನಗಳ ಕಾಲ ಕಟ್ಟೆಚ್ಚರ ವಹಿಸುವಂತೆ ಸೂಚಿಸಿದ್ದು, ವಿಶೇಷವಾಗಿ ಸಿಡಿಲು ಬರುವ ಸಂದರ್ಭದಲ್ಲಿ ಮರದ ಕೆಳಗೆ ಅಥವಾ ಬಯಲು ಪ್ರದೇಶದಲ್ಲಿ ನಿಲ್ಲದಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.

0 Comments