ರಾಮನಗರ : ಡಿ.ಕೆ. ಶಿವಕುಮಾರ್ ಅವರ ಪ್ರಮಾಣವಚನ ಸಮಾರಂಭಕ್ಕೆ ಅವರ ತವರು ಜಿಲ್ಲೆ ರಾಮನಗರದಲ್ಲಿ ಭರ್ಜರಿ ಸಿದ್ಧತೆಗಳು ಆರಂಭವಾಗಿವೆ. ಹೈಕಮಾಂಡ್ ಮಟ್ಟದಲ್ಲಿ ಪ್ರಕ್ರಿಯೆಗಳು ಚುರುಕಾಗಿರುವ ಬೆನ್ನಲ್ಲೇ, ಪದಗ್ರಹಣ ಕಾರ್ಯಕ್ರಮಕ್ಕೆ ರಾಮನಗರ ಜಿಲ್ಲೆಯಿಂದಲೇ 40 ರಿಂದ 50 ಸಾವಿರ ಜನರನ್ನು ಬೆಂಗಳೂರಿಗೆ ಕರೆದೊಯ್ಯಲು ಕಾಂಗ್ರೆಸ್ ನಿರ್ಧರಿಸಿದೆ.
ಡಿಕೆಶಿ ಪದಗ್ರಹಣ ಕಾರ್ಯಕ್ರಮದ ಸಿದ್ಧತೆಗಳ ಹಿನ್ನೆಲೆಯಲ್ಲಿ ರಾಮನಗರ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರ ತುರ್ತು ಪೂರ್ವಭಾವಿ ಸಭೆ ನಡೆಸಿದರು. ಸಭೆಯಲ್ಲಿ ಜಿಲ್ಲೆಯಿಂದ ಗರಿಷ್ಠ ಸಂಖ್ಯೆಯಲ್ಲಿ ಜನರನ್ನು ಕಾರ್ಯಕ್ರಮಕ್ಕೆ ಸುರಕ್ಷಿತವಾಗಿ ಕರೆದೊಯ್ಯುವ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು.
ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಇಕ್ಬಾಲ್ ಹುಸೇನ್ ಅವರು ಜಿಲ್ಲೆಯ ಸಿದ್ಧತೆಗಳ ಕುರಿತು ಮಾಹಿತಿ ನೀಡಿದರು. ಜಿಲ್ಲೆಯಿಂದ ಒಟ್ಟು 40 ರಿಂದ 50 ಸಾವಿರ ಜನ ಭಾಗಿಯಾಗುವ ನಿರೀಕ್ಷೆಯಿದೆ. ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರದಿಂದ ಕನಿಷ್ಠ 10 ಸಾವಿರ ಕಾರ್ಯಕರ್ತರನ್ನು ಕರೆತರಲು ಯೋಜನೆ ರೂಪಿಸಲಾಗಿದೆ. ಬಹುಶಃ ಮುಂದಿನ ಬುಧವಾರದೊಳಗೆ ಅಥವಾ ಅದಕ್ಕಿಂತ ಮೊದಲೇ ಪ್ರಮಾಣ ವಚನ ಕಾರ್ಯಕ್ರಮ ನಡೆಯುವ ಸಾಧ್ಯತೆಯಿದೆ. ಶನಿವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಪ್ರಮುಖ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ದಿನಾಂಕ ಸೇರಿದಂತೆ ಎಲ್ಲಾ ಅಂತಿಮ ತೀರ್ಮಾನಗಳು ಹೊರಬೀಳಲಿವೆ ಎಂದು ತಿಳಿಸಿದರು

0 Comments