ಪುತ್ತೂರು : ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ಯುವತಿಯರಿಗೆ ಜಲಪಾತ ವೀಕ್ಷಣೆಯ ಪ್ರವಾಸದ ವೇಳೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಮೂವರು ಯುವಕರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್ ಪ್ರಕಟಣೆಯ ಪ್ರಕಾರ, ಮೇ 20ರಂದು ಯುವತಿಯರು ಬೆಳ್ತಂಗಡಿ ಠಾಣಾ ವ್ಯಾಪ್ತಿಯ ಜಲಪಾತಕ್ಕೆ ತೆರಳಿದ್ದರು. ಈ ವೇಳೆ ಅವರೊಂದಿಗೆ ಬಂದಿದ್ದ ಮೂವರು ಯುವಕರು ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಯುವತಿಯರು ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿದ್ದು, ಸ್ಥಳದಲ್ಲಿದ್ದ ಸಾರ್ವಜನಿಕರು ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಬಳಿಕ ಪೊಲೀಸರು ಮೂವರು ಯುವಕರನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದು, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮೂವರು ಯುವಕರು ಕಾಸರಗೋಡು ಮೂಲದವರೆಂದು ಹೇಳಲಾಗಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

0 Comments