ತಿರುವನಂತಪುರ: ಕೇರಳದಲ್ಲಿ ಇಂದು ಕೂಡ ಮಳೆ ಅಬ್ಬರ ಮುಂದುವರಿಯುವ ಸಾಧ್ಯತೆ ಇದ್ದು, ಭಾರತೀಯ ಹವಾಮಾನ ಇಲಾಖೆ ರಾಜ್ಯದ ಎಂಟು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಿದೆ.
ಕಾಸರಗೋಡು, ಕಣ್ಣೂರು, ಕೋಝಿಕ್ಕೋಡ್, ವಯನಾಡು, ಮಲಪ್ಪುರಂ , ಎರ್ನಾಕುಳಂ, ತ್ರಿಶೂರ್ ಹಾಗೂ ಆಲಪ್ಪುಲ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಚ್ಚರಿಕೆ ಸೂಚನೆ ನೀಡಲಾಗಿದೆ. ಉಳಿದ ಜಿಲ್ಲೆಗಳಲ್ಲಿ ವಿಶೇಷ ಎಚ್ಚರಿಕೆ ಇಲ್ಲದಿದ್ದರೂ, ಕೆಲವೆಡೆ ಗುಡುಗು-ಮಿಂಚು ಸಹಿತ ಮಳೆ ಹಾಗೂ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ.
ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಕೇರಳ-ಲಕ್ಷದ್ವೀಪ ಕರಾವಳಿ ಪ್ರದೇಶಗಳಲ್ಲಿ ಇಂದು ಮೀನುಗಾರಿಕೆಗೆ ನಿಷೇಧ ಹೇರಲಾಗಿದೆ. ಸಮುದ್ರಕ್ಕೆ ತೆರಳದಂತೆ ಮೀನುಗಾರರಿಗೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ನಾಳೆ ಕಾಸರಗೋಡು ಮತ್ತು ಕಣ್ಣೂರು ಜಿಲ್ಲೆಗಳಿಗೆ, ಜೂನ್ 25ರಂದು ಪತ್ತನಂತಿಟ್ಟ, ಆಲಪ್ಪುಲ , ಕೊಟ್ಟಾಯಂ ಹಾಗೂ ಎರ್ನಾಕುಳಂ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಜಾರಿಯಲ್ಲಿರಲಿದೆ. ಈ ಅವಧಿಯಲ್ಲಿ 24 ಗಂಟೆಗಳಲ್ಲಿ 64.5 ಮಿ.ಮೀ.ದಿಂದ 115.5 ಮಿ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದೇ ವೇಳೆ, ಈ ತಿಂಗಳ ಅಂತ್ಯದ ವೇಳೆಗೆ ದಕ್ಷಿಣ ಪಶ್ಚಿಮ ಮುಂಗಾರು ಚುರುಕುಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಅಂದಾಜಿಸಿದ್ದಾರೆ. ಈ ವರ್ಷ ರಾಜ್ಯದಲ್ಲಿ ಕೋಝಿಕ್ಕೋಡ್, ಮಲಪ್ಪುರಂ, ಪತ್ತನಂತಿಟ್ಟ ಮತ್ತು ತಿರುವನಂತಪುರ ಜಿಲ್ಲೆಗಳಲ್ಲಿ ಮಾತ್ರ ಸರಾಸರಿ ಮಳೆಯಾಗಿದೆ. ಉಳಿದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಸಾಮಾನ್ಯಕ್ಕಿಂತ ಕಡಿಮೆಯಾಗಿದೆ.

0 Comments