ತಿರುವನಂತಪುರ : ಕೇರಳದಲ್ಲಿ ಮಳೆಯ ಅಬ್ಬರ ಮುಂದುವರಿಯಲಿದ್ದು, ಕೋಝಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಮಂಗಳವಾರವೂ ಮಳೆಯ ತೀವ್ರತೆ ಮುಂದುವರಿಯಲಿದ್ದು, ಕಣ್ಣೂರು ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಜಾರಿಯಲ್ಲಿರಲಿದೆ. ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ಉಳಿದ ಜಿಲ್ಲೆಗಳಲ್ಲಿಯೂ ಭಾರೀ ಮಳೆಯ ಸಾಧ್ಯತೆ ಹಿನ್ನೆಲೆಯಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ತಿರುವನಂತಪುರ, ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಝ, ಕೊಟ್ಟಾಯಂ, ಇಡುಕ್ಕಿ, ಎರ್ನಾಕುಳಂ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ ಹಾಗೂ ವಯನಾಡು ಜಿಲ್ಲೆಗಳಲ್ಲಿ ಇಂದು ಎಲ್ಲೋ ಅಲರ್ಟ್ ಜಾರಿಯಲ್ಲಿದೆ.
ಅರಬ್ಬಿ ಸಮುದ್ರದಲ್ಲಿ ಹಾಗೂ ಉತ್ತರ ತೆಲಂಗಾಣದ ಸಮೀಪ ಚಕ್ರವಾತದ ಪ್ರಭಾವ ವಲಯಗಳು ನಿರ್ಮಾಣವಾಗಿರುವುದರಿಂದ ರಾಜ್ಯದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಜುಲೈ 3ರವರೆಗೆ ಕೇರಳ, ಮಾಹೆ ಹಾಗೂ ಲಕ್ಷದ್ವೀಪ ಕರಾವಳಿ ಪ್ರದೇಶಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಗಂಟೆಗೆ 60 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ನಡುವೆ ವಿವಿಧ ಜಿಲ್ಲೆಗಳಲ್ಲಿ ಮಳೆಯಿಂದ ಹಾನಿ ಸಂಭವಿಸಿದೆ. ಇಡುಕ್ಕಿ ಜಿಲ್ಲೆಯ ಮನಿಯಾರಂಕುಡಿ ಪ್ರದೇಶದಲ್ಲಿ ಭಾರೀ ಮಳೆಯಿಂದ ಮರವೊಂದು ಮನೆಯ ಮೇಲೆ ಬಿದ್ದು ಭಾಗಶಃ ಹಾನಿಯಾಗಿದೆ. ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ. ಗುಡುಗು-ಮಿಂಚಿನ ಸಂದರ್ಭಗಳಲ್ಲಿ ಸಾರ್ವಜನಿಕರು ಹೆಚ್ಚಿನ ಜಾಗ್ರತೆ ವಹಿಸುವಂತೆ ಹಾಗೂ ಅನಗತ್ಯವಾಗಿ ಹೊರಗೆ ಸಂಚರಿಸುವುದನ್ನು ತಪ್ಪಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

0 Comments