ಉಡುಪಿ : ಉದ್ಯಾವರ ಸಮೀಪದ ಪಾಪನಾಶಿನಿ ಸೇತುವೆಯಿಂದ ನದಿಗೆ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ಪಿತ್ರೋಡಿ ನಿವಾಸಿ ಹರ್ಷಿತ್ ಶೆಟ್ಟಿ (28) ಎಂದು ಗುರುತಿಸಲಾಗಿದೆ. ಅವರು ಬೆಳಿಗ್ಗೆ ಕ್ರಿಕೆಟ್ ಆಡಲು ಹೋಗುವುದಾಗಿ ಮನೆಯಲ್ಲಿ ತಿಳಿಸಿ ಹೊರಟಿದ್ದರು. ಆದರೆ ಬಹಳ ಹೊತ್ತಾದರೂ ಮನೆಗೆ ಮರಳದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹುಡುಕಾಟ ಆರಂಭಿಸಿದ್ದರು.
ಈ ವೇಳೆ ಪಾಪನಾಶಿನಿ ಸೇತುವೆಯ ಮೇಲೆ ಹರ್ಷಿತ್ ಅವರ ದ್ವಿಚಕ್ರ ವಾಹನ ಪತ್ತೆಯಾಗಿದ್ದು, ಮೊಬೈಲ್ ಫೋನ್ ಕೂಡ ಸ್ವಿಚ್ ಆಫ್ ಆಗಿದ್ದ ಕಾರಣ ಅನುಮಾನ ವ್ಯಕ್ತವಾಗಿತ್ತು. ಬಳಿಕ ಸ್ಥಳೀಯರು ಹಾಗೂ ಮುಳುಗು ತಜ್ಞ ಈಶ್ವರ ಮಲ್ಪೆ ನೇತೃತ್ವದಲ್ಲಿ ನದಿಯಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಯಿತು. ಸಂಜೆ ವೇಳೆಗೆ ನದಿಯಲ್ಲಿ ಹರ್ಷಿತ್ ಅವರ ಮೃತದೇಹ ಪತ್ತೆಯಾಗಿದೆ. ಮೃತರು ಮಲ್ಪೆಯ ಸಹಕಾರಿ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದರು ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ಸಂಬಂಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

0 Comments