ಕೊಚ್ಚಿ : ಎರ್ನಾಕುಳಂ ಜಿಲ್ಲೆಯ ಕೂತ್ತಾಟ್ಟುಕುಳ ಸಮೀಪ ರಸ್ತೆ ದಾಟುತ್ತಿದ್ದ ವೇಳೆ ಹಾಲಿನ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧರೋರ್ವರು ಮೃತಪಟ್ಟ ಘಟನೆ ನಡೆದಿದೆ. ಕೂತ್ತಾಟ್ಟುಕುಳದ ಚೂಳಾಯಿಕ್ಕೋಟಿಲ್ ನಿವಾಸಿ ಸಿ.ಜೆ. ಜೋಸೆಫ್ (82) ಮೃತಪಟ್ಟವರು. ಸೋಮವಾರ ಸಂಜೆ ಸುಮಾರು 4 ಗಂಟೆ ವೇಳೆಗೆ ತಮ್ಮ ಮನೆಯ ಸಮೀಪದ ಎಂಸಿ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದಾಗ ಕೂತ್ತಾಟ್ಟುಕುಳ ಕಡೆಯಿಂದ ಬಂದ ಹಾಲಿನ ಲಾರಿ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಜೋಸೆಫ್ ಅವರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ಬಳಿಕ ಲಾರಿ ಚಾಲಕ ವಾಹನ ನಿಲ್ಲಿಸಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಸ್ಥಳೀಯರು ಗಾಯಾಳುವನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪರಾರಿಯಾಗಿರುವ ಲಾರಿ ಚಾಲಕನ ಪತ್ತೆಗೆ ಕ್ರಮ ಕೈಗೊಂಡಿದ್ದು, ಅಪಘಾತದ ಕುರಿತು ತನಿಖೆ ಮುಂದುವರಿಸಿದ್ದಾರೆ.

0 Comments