ಬಂಟ್ವಾಳ : ಶಾಲಾ ಮಕ್ಕಳನ್ನು ಮನೆಗೆ ಕರೆದೊಯ್ಯುವಾಗ ಶಾಲಾ ಬಸ್ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದ ಪರಿಣಾಮ ಆರು ವರ್ಷದ ಬಾಲಕಿಯೊಬ್ಬಳು ಮೃತಪಟ್ಟ ದಾರುಣ ಘಟನೆ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ಬಳಿ ಬುಧವಾರ ಸಂಜೆ ನಡೆದಿದೆ.
ಮೃತ ಬಾಲಕಿಯನ್ನು ಕಲ್ಲಡ್ಕ ಶ್ರೀರಾಮ ಆಂಗ್ಲ ಮಾಧ್ಯಮ ಶಾಲೆಯ ಎಲ್‌ಕೆಜಿ ವಿದ್ಯಾರ್ಥಿನಿ ಚಿರನ್ವಿ (6) ಎಂದು ಗುರುತಿಸಲಾಗಿದೆ. ಈಕೆ ಬಂಟ್ವಾಳ ತಾಲೂಕಿನ ಬಿಳಿಯೂರು ಗ್ರಾಮದ ತೋಟ ಹೌಸ್ ನಿವಾಸಿಗಳಾದ ಚಂದ್ರಶೇಖರ ಮತ್ತು ಅನಿತಾ ದಂಪತಿಯ ಪುತ್ರಿ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಪೆರಾಜೆ ಸಾದಿಕುಕ್ಕು ನಿವಾಸಿ ಗಣೇಶ್ ಗೌಡ ಅವರ ಪುತ್ರಿ ಅನ್ವಿ ಅವರನ್ನು ಮಂಗಳೂರಿನ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೋರ್ವ ಗಾಯಾಳು ಪೆರ್ನೆ ನಿವಾಸಿ ಕ್ಷಿತಿ ರೈ ಅವರಿಗೆ ಕಲ್ಲಡ್ಕದ ಪುಷ್ಪರಾಜ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರತಿದಿನದಂತೆ ಶಾಲಾ ಮಕ್ಕಳನ್ನು ಮನೆಗೆ ತಲುಪಿಸಲು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಆಂಗ್ಲ ಮಾಧ್ಯಮ ವಿಭಾಗದ ಮಿನಿ ಬಸ್ ಸಂಜೆ ಶಾಲೆಯಿಂದ ಹೊರಟಿತ್ತು. ಹೆದ್ದಾರಿ ಮೂಲಕ ಮಾಣಿ, ಭರಣಿಕೆರೆ, ಕಲ್ಲೆಟ್ಟಿ ಮಾರ್ಗವಾಗಿ ಪೆರ್ನೆಗೆ ತೆರಳುತ್ತಿದ್ದ ವೇಳೆ, ಕೆಲ ಮಕ್ಕಳನ್ನು ಇಳಿಸಿದ ಬಳಿಕ ಕಲ್ಲೆಟ್ಟಿಯ ಶ್ರೀ ಕಾನಲ್ತಾಯ ದೈವಸ್ಥಾನದ ಸಮೀಪ ರಸ್ತೆ ಬದಿಯಲ್ಲಿದ್ದ ಬೃಹತ್ ಮರ ಏಕಾಏಕಿ ಬಸ್ ಮೇಲೆ ಉರುಳಿಬಿದ್ದಿದೆ.
ಅಪಘಾತದ ತೀವ್ರತೆಗೆ 24 ಆಸನಗಳ ಮಿನಿ ಬಸ್ ಸಂಪೂರ್ಣ ಜಖಂಗೊಂಡಿದ್ದು, ಬಸ್‌ನಲ್ಲಿದ್ದ ಪುಟಾಣಿ ಮಕ್ಕಳು ಭಯಭೀತರಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಚಿರನ್ವಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃತಪಟ್ಟಿದ್ದಾಳೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಬಂಟ್ವಾಳ ತಹಶೀಲ್ದಾರ್, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕೆ. ಅವರು ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯ ಪರಿಶೀಲನೆ ನಡೆಸಿದರು. ಮೃತ ಬಾಲಕಿಯ ಕುಟುಂಬಕ್ಕೆ ಜಿಲ್ಲಾಧಿಕಾರಿಗಳು ಸಾಂತ್ವನ ಹೇಳಿ, ಸರ್ಕಾರದಿಂದ ಅಗತ್ಯ ಪರಿಹಾರ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಇದೇ ವೇಳೆ ಘಟನೆಯ ಕುರಿತು ಶಾಲಾ ಆಡಳಿತ ಮತ್ತು ಸಿಬ್ಬಂದಿಯಿಂದ ಸಂಪೂರ್ಣ ಮಾಹಿತಿ ಸಂಗ್ರಹಿಸಲಾಯಿತು.

0 Comments