ಉತ್ತರ ಕನ್ನಡ : ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲು ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಧಾರವಾಡದಿಂದ ಅಂಕೋಲಾ ಕಡೆಗೆ ಪ್ರಯಾಣಿಸುತ್ತಿದ್ದ ಕ್ರೂಸರ್ ವಾಹನ ಮತ್ತು ಯಲ್ಲಾಪುರದಿಂದ ಅಂಕೋಲಾ ಕಡೆಗೆ ಸಾಗುತ್ತಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಕ್ರೂಸರ್ ವಾಹನ ಸಂಪೂರ್ಣ ಜಖಂಗೊಂಡಿದ್ದು, ಅದರಲ್ಲಿದ್ದ ಆರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ಮೃತರಲ್ಲಿ ಧಾರವಾಡ ಮೂಲದ ಬಸವರಾಜ್, ಮಂಜುನಾಥ್ ಚುಲ್ಲಕ್ಕಿ, ಅಭಿಷೇಕ್ ಮಲ್ಲೇಶ್ ಮಡಬಾವಿ ಹಾಗೂ ಅಕ್ಷಯ್ ಮಲ್ಲಣ್ಣನವರ್ ಅವರ ಗುರುತು ಪತ್ತೆಯಾಗಿದೆ. ಉಳಿದ ಇಬ್ಬರ ಗುರುತು ಇನ್ನಷ್ಟೇ ದೃಢಪಡಿಸಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಈ ಸಂಬಂಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ನಿಖರ ಕಾರಣ ಏನು ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

0 Comments