ಬೆಂಗಳೂರು : ಕೇರಳ ಕೆಎಸ್‌ಆರ್‌ಟಿಸಿ ಬಸ್‌ಗೆ ಬೆಂಕಿ ಹೊತ್ತಿಕೊಂಡ ಘಟನೆ ನಗರದ ಜ್ಞಾನಭಾರತಿ ಮೆಟ್ರೋ ನಿಲ್ದಾಣದ ಸಮೀಪ ನಡೆದಿದೆ.
ನಿನ್ನೆ ಸಂಜೆ ಸುಮಾರು 7 ಗಂಟೆ ವೇಳೆಗೆ ಬಸ್ ಸಂಚರಿಸುತ್ತಿದ್ದಾಗ ಏಕಾಏಕಿ ಎಂಜಿನ್ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಹೊಗೆ ಆವರಿಸಿತು. ಬೆಂಕಿಯ ತೀವ್ರತೆಗೆ ಬಸ್‌ನ ಮುಂಭಾಗ ಹಾಗೂ ಒಳಭಾಗಕ್ಕೆ ಹಾನಿಯಾಗಿದೆ.
ಬಸ್‌ನಲ್ಲಿದ್ದ ಇಬ್ಬರು ಪ್ರಯಾಣಿಕರು, ಚಾಲಕ ಹಾಗೂ ನಿರ್ವಾಹಕರು ಸಮಯಪ್ರಜ್ಞೆಯಿಂದ ಹೊರಬಂದ ಕಾರಣ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಬೆಂಕಿ ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.

0 Comments