ಕುಂದಾಪುರ : ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಟ್ರಕ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕೋಟೇಶ್ವರ ಕಿನಾರಾ ಜಂಕ್ಷನ್ ಸಮೀಪ ನಡೆದಿದೆ. ಮೃತರನ್ನು ಇಡೂರು-ಕುಂಜಾಡಿ ಜನ್ನಾಲು ಸಮೀಪದ ಕೊಳ್ತ ನಿವಾಸಿ ಭರತ್ ಶೆಟ್ಟಿ (34) ಎಂದು ಗುರುತಿಸಲಾಗಿದೆ.
ಕೇರಳದಿಂದ ನಾಸಿಕ್‌ಗೆ ಪ್ಲೈವುಡ್ ಸಾಗಿಸುತ್ತಿದ್ದ ಟ್ರಕ್ ಉಡುಪಿಯಿಂದ ಕುಂದಾಪುರದತ್ತ ತೆರಳುತ್ತಿದ್ದ ವೇಳೆ, ಅದೇ ದಿಕ್ಕಿನಲ್ಲಿ ಸಾಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದ ಭರತ್ ಶೆಟ್ಟಿ ಅವರಿಗೆ ತೀವ್ರ ಗಾಯಗಳಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಭರತ್ ಅವರು ಕೋಟೇಶ್ವರ ಸಮೀಪದ ಪೇಂಟ್ ಶೋರೂಂನಲ್ಲಿ ಉದ್ಯೋಗಿಯಾಗಿದ್ದರು. ಕಳೆದ ವರ್ಷವಷ್ಟೇ ವಿವಾಹವಾಗಿದ್ದ ಅವರು ಸಾಮಾನ್ಯವಾಗಿ ಕಾರಿನಲ್ಲಿ ಕೆಲಸಕ್ಕೆ ತೆರಳುತ್ತಿದ್ದರು. ಆದರೆ ಘಟನೆ ನಡೆದ ದಿನ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.
ಪ್ರಾಥಮಿಕ ತನಿಖೆಯಲ್ಲಿ, ಮದ್ಯದ ಅಮಲಿನಲ್ಲಿದ್ದ ಟ್ರಕ್ ಚಾಲಕನ ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣ ಎಂಬ ಆರೋಪ ಕೇಳಿಬಂದಿದೆ. ಸುದ್ದಿ ತಿಳಿದ ಕೂಡಲೇ ಕುಂದಾಪುರ ಸಂಚಾರ ಪೊಲೀಸ್ ಠಾಣೆಯ ಉಪನಿರೀಕ್ಷಕ ಅನೂಪ್ ನಾಯಕ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

0 Comments