ಬಂಟ್ವಾಳ: ಕಾಲೇಜಿಗೆ ತೆರಳಲು ಬಸ್‌ಗಾಗಿ ಕಾಯುತ್ತಿದ್ದ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ ಮೇಲೆ ಯುವಕನೊಬ್ಬ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ಸೋಮವಾರ ಬೆಳಿಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಮೋಂತಿಮಾರು ಪಡ್ಪು ಬಸ್ ನಿಲ್ದಾಣದಲ್ಲಿ ನಡೆದಿದೆ.
ಮಂಚಿ ಸಮೀಪದ ಮೋಂತಿಮಾರು ಪಡ್ಪು ನಿವಾಸಿ ಮೊಹಮ್ಮದ್ ಜವ್ವಾರ್ (28) ಹಲ್ಲೆ ನಡೆಸಿದ ಆರೋಪಿಯಾಗಿದ್ದು, ಬಸ್ ನಿಲ್ದಾಣದ ಸಮೀಪ ದಿನಸಿ ಅಂಗಡಿ ನಡೆಸುತ್ತಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ವಿದ್ಯಾರ್ಥಿನಿ ಬಸ್‌ಗಾಗಿ ಕಾಯುತ್ತಿದ್ದ ವೇಳೆ ಆರೋಪಿ ಏಕಾಏಕಿ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಘಟನೆಯನ್ನು ಕಂಡು ಸ್ಥಳದಲ್ಲಿದ್ದ ಪ್ರಯಾಣಿಕರು ಜೋರಾಗಿ ಕಿರುಚಿದಾಗ ಆರೋಪಿ ಅಲ್ಲಿಂದ ಪರಾರಿಯಾಗಿದ್ದಾನೆ.
ಬಳಿಕ ಆರೋಪಿ ಸ್ವತಃ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ಹಾಜರಾಗಿ ಶರಣಾಗಿದ್ದಾನೆ. ಹಲ್ಲೆಯಿಂದ ಗಾಯಗೊಂಡ ವಿದ್ಯಾರ್ಥಿನಿಯನ್ನು ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಪ್ರಕರಣ ದಾಖಲಿಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

0 Comments