ಬಂಟ್ವಾಳ : ಬಿ.ಸಿ.ರೋಡ್‌ನ ಹೊಸ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಬಸ್‌ಗಾಗಿ ಕಾಯುತ್ತಿದ್ದ ಯುವತಿಯನ್ನು ಗುರುವಾರ ಸಂಜೆ ಸುಮಾರು 6 ಗಂಟೆ ವೇಳೆಗೆ ವ್ಯಕ್ತಿಯೊಬ್ಬ ಚಾಕುವಿನಿಂದ ಮಾರಣಾಂತಿಕವಾಗಿ ಇರಿದು ಹತ್ಯೆ ಮಾಡಿದ ಬೆಚ್ಚಿಬೀಳಿಸುವ ಘಟನೆ ನಡೆದಿದೆ.
ಮೃತ ಯುವತಿಯನ್ನು ಬಂಟ್ವಾಳ ತಾಲೂಕಿನ ಕಕ್ಯಪದವು ನಿವಾಸಿ ಲಾವಣ್ಯ ಎಂದು ಗುರುತಿಸಲಾಗಿದೆ. ಸಂಜೆ ಕೆಲಸ ಮುಗಿಸಿ ಮನೆಗೆ ತೆರಳಲು ಬಸ್‌ಗಾಗಿ ಕಾಯುತ್ತಿದ್ದ ವೇಳೆ ಆರೋಪಿ ಅಲ್ಲಿಗೆ ಬಂದು ತನ್ನ ಬ್ಯಾಗ್‌ನಲ್ಲಿದ್ದ ಚಾಕುವನ್ನು ಹೊರತೆಗೆದಿದ್ದಾನೆ. ಅಪಾಯವನ್ನು ಅರಿತ ಲಾವಣ್ಯ ಅಲ್ಲಿಂದ ಓಡಿ ತಪ್ಪಿಸಿಕೊಳ್ಳಲು ಯತ್ನಿಸಿದರೂ, ಆರೋಪಿ ಬೆನ್ನಟ್ಟಿ ಸಾರ್ವಜನಿಕರ ಎದುರಲ್ಲೇ ಮನಬಂದಂತೆ ಚಾಕುವಿನಿಂದ ಇರಿದಿದ್ದಾನೆ. ತೀವ್ರವಾಗಿ ಗಾಯಗೊಂಡ ಲಾವಣ್ಯ ರಕ್ತದ ಮಡುವಿನಲ್ಲಿ ಬಿದ್ದಿದ್ದು, ಸ್ಥಳೀಯರು ತಕ್ಷಣವೇ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಪ್ರಾಥಮಿಕ ಪೊಲೀಸ್ ತನಿಖೆಯಲ್ಲಿ ಆರೋಪಿ ಚೇತನ್ ಎಂದು ಗುರುತಿಸಲಾಗಿದ್ದು, ಆತ ಮೃತ ಯುವತಿಯ ದೂರದ ಸಂಬಂಧಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಆರೋಪಿ ಲಾವಣ್ಯ ಮೇಲೆ ಏಕಮುಖ ಪ್ರೀತಿ ಹೊಂದಿದ್ದ ಹಿನ್ನೆಲೆಯಲ್ಲಿ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಕೃತ್ಯ ಎಸಗಿದ ಬಳಿಕ ಆತ ಸ್ಥಳದಿಂದ ಪರಾರಿಯಾಗಿದ್ದಾನೆ.
ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಸಂಬಂಧ ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ಆರೋಪಿ ಪರಾರಿಯಾಗಿದ್ದು, ಆತನ ಪತ್ತೆ ಮತ್ತು ಬಂಧನಕ್ಕಾಗಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಶೀಘ್ರದಲ್ಲೇ ಆರೋಪಿಯನ್ನು ಬಂಧಿಸಲಾಗುವುದು," ಎಂದು ತಿಳಿಸಿದ್ದಾರೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಬಂಧನಕ್ಕಾಗಿ ವ್ಯಾಪಕ ಶೋಧ ಕಾರ್ಯ ಮುಂದುವರಿದಿದೆ.

0 Comments