ಪೆರ್ಲ : ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸೇವಾ ಸಂಘ (ರಿ), ಪೆರ್ಲ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಮಹಿಳಾ ಸಮಿತಿಗಳ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತಿ ಕಾರ್ಯಕ್ರಮವು ಆಗಸ್ಟ್ 30 ರವಿವಾರದಂದು ಪೆರ್ಲ ವ್ಯಾಪಾರ ಭವನದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಅಂದು ಬೆಳಗ್ಗೆ 9 ಗಂಟೆಗೆ ದೀಪ ಪ್ರಜ್ವಲನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದ್ದು, ಬಳಿಕ ಬಿಲ್ಲವ ಮಹಿಳಾ ಸಮಿತಿಯ ಸದಸ್ಯರಿಂದ ಭಜನೆ ನಡೆಯಲಿದೆ. ಬೆಳಗ್ಗೆ 10 ಗಂಟೆಗೆ ಸಭಾ ಕಾರ್ಯಕ್ರಮ ಜರುಗಲಿದೆ.
ಬಿ.ಪಿ. ಶೇಣಿ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಡಾ. ಗೀತಾ ಪ್ರಕಾಶ್ ಅವರು ದಿಕ್ಕೂಚಿ ಭಾಷಣ ಮಾಡಲಿದ್ದಾರೆ. ಸಿಬಿಐ ಬೆಂಗಳೂರು ಪಬ್ಲಿಕ್ ಪ್ರಾಸಿಕ್ಯೂಟರ್ ಶಿವಾನಂದ ಪೆರ್ಲ ಹಾಗೂ ಜನಾರ್ದನ ನೇರಪ್ಪಾಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಅಖಿಲೇಶ್ ಕಾನ ಸ್ವಾಗತಿಸಲಿದ್ದು, ಸಹನಾ ರಘುರಾಮ್ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಹಾಗೂ ಗೌರವಾರ್ಪಣೆ ನಡೆಯಲಿದೆ. ಕರಾಟೆ ತರಬೇತುದಾರರಾದ ಸೌಮ್ಯ ಅವಿನಾಶ್ ಚೆಂಬ್ರಕಾನ ಹಾಗೂ ಹಿರಿಯ ನಾಟಿ ವೈದ್ಯೆ ಲಕ್ಷ್ಮೀ ಕಾನ ಅವರನ್ನು ಸನ್ಮಾನಿಸಲಾಗುವುದು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಹಾಗೂ ಸಾಧನೆ ಮಾಡಿದ ಗಣ್ಯರಿಗೆ ಗೌರವಾರ್ಪಣೆ ನಡೆಯಲಿದೆ. ತುಳು-ಕನ್ನಡ ಕವಯತ್ರಿ ಯಶೋದಾ ಕಾನ ಕವಿತಾ ವಾಚನ ನಡೆಸಲಿದ್ದಾರೆ.
ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ಪ್ಲಸ್ ಟು ಪರೀಕ್ಷೆಯಲ್ಲಿ ಎಲ್ಲಾ ವಿಷಯಗಳಲ್ಲಿ ಎ ಪ್ಲಸ್ ಪಡೆದ ವಿದ್ಯಾರ್ಥಿಗಳು, ಪದವಿ ಹಾಗೂ ಸ್ನಾತಕೋತ್ತರ ಪದವಿಯ ಅಂತಿಮ ವರ್ಷದಲ್ಲಿ ಡಿಸ್ಟಿಂಕ್ಷನ್ ಪಡೆದ ವಿದ್ಯಾರ್ಥಿಗಳು ಹಾಗೂ ಕ್ರೀಡೆ, ಕಲೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗೌರವಿಸಲಾಗುವುದು. ಅಮಿತಾ ಎಂ. ಕಾಟುಕುಕ್ಕೆ ಧನ್ಯವಾದ ಅರ್ಪಿಸಲಿದ್ದು, ಪುರುಷೋತ್ತಮ ಪೆರ್ಲ ಕಾರ್ಯಕ್ರಮ ನಿರೂಪಿಸಲಿದ್ದಾರೆ. ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಂಘದ ಅಧ್ಯಕ್ಷರು ಹಾಗೂ ಸದಸ್ಯರು ವಿನಂತಿಸಿದ್ದಾರೆ.

0 Comments