ಮಂಗಳೂರು : ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ 21 ವರ್ಷದ ಯುವಕನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶ ಮೂಲದ ಕೆ. ಶ್ರೀಕಾಂತ್ (21) ಬಂಧಿತ ಆರೋಪಿ.
ಕಳೆದ ವರ್ಷದ ಸೆಪ್ಟೆಂಬರ್‌ನಿಂದ ನವೆಂಬರ್‌ವರೆಗೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ 16 ವರ್ಷದ ಬಾಲಕಿಯ ಮೇಲೆ ಆರೋಪಿ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ವಿಚಾರವನ್ನು ಯಾರಿಗೂ ಹೇಳಬಾರದೆಂದು ಬಾಲಕಿಗೆ ಬೆದರಿಕೆ ಹಾಕಿದ್ದ ಎನ್ನಲಾಗಿದೆ.
ಘಟನೆಯ ಬಗ್ಗೆ ಯಾರಿಗೂ ಮಾಹಿತಿ ನೀಡದ ಬಾಲಕಿ, ಆಗಸ್ಟ್ 22ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಬಳಿಕ ಪ್ರಕರಣ ಬೆಳಕಿಗೆ ಬಂದಿದ್ದು, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಪರಾರಿಯಾಗಲು ಯತ್ನಿಸಿದ್ದ. ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಹಿಂದೂಪುರದಲ್ಲಿರುವ ತನ್ನ ಊರಿಗೆ ತೆರಳಲು ಪ್ರಯತ್ನಿಸುತ್ತಿದ್ದ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಶ್ರೀಕಾಂತ್, ಧರ್ಮಸ್ಥಳದ ಬಾಲಕಿಯ ಪರಿಚಯ ಮಾಡಿಕೊಂಡು ಬಳಿಕ ಆಕೆಯೊಂದಿಗೆ ಸಂಬಂಧ ಬೆಳೆಸಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಬಂಧಿತ ಆರೋಪಿಯನ್ನು ಮಂಗಳೂರಿನ ಪೋಕ್ಸೋ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

0 Comments