ಉಪ್ಪಿನಂಗಡಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಇಬ್ಬರು ಮಕ್ಕಳನ್ನು ಬಾವಿಗೆ ಎಸೆದಿರುವ ಆರೋಪ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ನೆಯಲ್ಲಿ ನಡೆದಿದೆ. ಘಟನೆಯಲ್ಲಿ ಓರ್ವ ಮಗು ಮೃತಪಟ್ಟಿದ್ದು, ಮತ್ತೊಂದು ಮಗು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದೆ.
ಪೆರ್ನೆ ನಿವಾಸಿ ಸಿನಾನ್ (32) ಹಾಗೂ ಅವರ ಪತ್ನಿ ನೂರುನ್ನಿಸಾ (28) ನಡುವೆ ಫೋನ್ ಕರೆಯಲ್ಲಿ ವೈವಾಹಿಕ ವಿಚಾರಕ್ಕೆ ಸಂಬಂಧಿಸಿದಂತೆ ಕಲಹ ನಡೆದಿತ್ತು ಎನ್ನಲಾಗಿದೆ. ಈ ವೇಳೆ ಕೋಪಗೊಂಡ ನೂರುನ್ನಿಸಾ, ಮನೆಯಲ್ಲಿದ್ದ ತನ್ನ ಮೂರುವರೆ ವರ್ಷದ ಮಗು ಹಾಗೂ ಪತಿಯ ತಂಗಿಯ ಮೂರು ವರ್ಷದ ಮಗುವನ್ನು ಮನೆಯ ಸಮೀಪದ ಬಾವಿಗೆ ಎಸೆದಿದ್ದಾರೆ ಎಂದು ಆರೋಪಿಸಲಾಗಿದೆ.
ಘಟನೆ ಗಮನಿಸಿದ ಸ್ಥಳೀಯರು ತಕ್ಷಣ ಕಾರ್ಯಪ್ರವೃತ್ತರಾಗಿ ಬಾವಿಯಿಂದ ಇಬ್ಬರು ಮಕ್ಕಳನ್ನು ಮೇಲಕ್ಕೆತ್ತಿದ್ದಾರೆ. ಆದರೆ, ಪತಿಯ ತಂಗಿಯ ಮೂರು ವರ್ಷದ ಮಗು ಮೃತಪಟ್ಟಿದ್ದು, ನೂರುನ್ನಿಸಾ ಅವರ ಮಗುವನ್ನು ಗಂಭೀರ ಸ್ಥಿತಿಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ನೂರುನ್ನಿಸಾಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.


0 Comments