ಮಂಗಳೂರು : ಕರಾವಳಿ ಭಾಗದ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವ ಉದ್ದೇಶದಿಂದ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ವಿದ್ಯಾವಂತರು ಹಾಗೂ ಪ್ರತಿಭಾವಂತರನ್ನು ಹೊಂದಿರುವ ಪ್ರದೇಶವಾಗಿದೆ. ಈ ಭಾಗದ ಅಭಿವೃದ್ಧಿಗೆ ಮತ್ತಷ್ಟು ಶಕ್ತಿ ನೀಡುವ ಉದ್ದೇಶದಿಂದ ಸಂಪುಟ ಸಭೆ ಆಯೋಜಿಸಲಾಗಿದೆ ಎಂದರು.
ಕರಾವಳಿ ಭಾಗದ ಶಾಸಕರು ಮತ್ತು ಸಂಸದರು ಸ್ಥಳೀಯ ಸಮಸ್ಯೆಗಳು ಹಾಗೂ ವಿವಿಧ ಬೇಡಿಕೆಗಳನ್ನು ತಮ್ಮ ಗಮನಕ್ಕೆ ತಂದಿದ್ದಾರೆ. ಸಂಪುಟ ಸಭೆಯಲ್ಲಿ ಈ ಬೇಡಿಕೆಗಳ ಕುರಿತು ಚರ್ಚಿಸಿ, ಸಾಧ್ಯವಾದಷ್ಟು ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು
ಕಸ್ತೂರಿ ರಂಗನ್ ವರದಿ ಹಾಗೂ ಬರ ಪರಿಸ್ಥಿತಿ ಕುರಿತು ಎರಡು ದಿನಗಳ ವಿಶೇಷ ಅಧಿವೇಶನದಲ್ಲಿ ಚರ್ಚೆ ನಡೆಯಲಿದೆ. ವರದಿ ಕುರಿತು ಶಾಸಕರು ತಮ್ಮ ಅಭಿಪ್ರಾಯಗಳನ್ನು ಮಂಡಿಸಲು ಅವಕಾಶ ನೀಡಲಾಗಿದೆ. ಅರಣ್ಯ ಸಚಿವರೂ ಈ ಕುರಿತು ತಮ್ಮ ವರದಿಯನ್ನು ಮಂಡಿಸಲಿದ್ದಾರೆ ಎಂದರು.
ಕಸ್ತೂರಿ ರಂಗನ್ ವರದಿಯಿಂದ ಬಾಧಿತರಾಗಿರುವ ಜನರನ್ನು ನೇರವಾಗಿ ಭೇಟಿ ಮಾಡಿ ಅವರ ಅಭಿಪ್ರಾಯಗಳನ್ನು ಸಂಗ್ರಹಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

0 Comments