ಪುತ್ತೂರು: ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಹೊರಗಿದ್ದ ಕಾಣಿಕೆ ಡಬ್ಬಿಯನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಬದಿಯಡ್ಕದ ಸತೀಶ (31) ಎಂಬಾತನನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬದಿಯಡ್ಕದಲ್ಲಿ ಬಂಧಿಸಿದ್ದಾರೆ.
ಆ.24ರ ರಾತ್ರಿ ಅಪರಿಚಿತ ವ್ಯಕ್ತಿಯೊಬ್ಬರು ದೇವಸ್ಥಾನದ ಕಾಣಿಕೆ ಡಬ್ಬಿಯನ್ನು ಕಳವುಗೈದಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಡಬ್ಬಿಯಲ್ಲಿ ಸುಮಾರು 4,500 ರೂ ನಗದು ಹಾಗೂ 2,500 ರೂ. ಮೌಲ್ಯದ ಡಬ್ಬಿ ಇದ್ದು, ಈ ಕುರಿತು ದೇವಸ್ಥಾನದ ಆಡಳಿತ ಪದಾಧಿಕಾರಿ ವಿನೋದ್ ಕುಮಾರ್ ಬಿ.ನೀಡಿದ ದೂರಿನ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ತನಿಖೆ ನಡೆಸಿದ ಪೊಲೀಸರು ಕಾಸರಗೋಡಿನ ಕಿನ್ನಿಂಗಾರು, ಬದಿಯಡ್ಕ ಹಾಗೂ ಆದೂರು ಭಾಗಗಳಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯಿಂದ ಕಳವುಗೈದ ಕಾಣಿಕೆ ಡಬ್ಬಿ ಹಾಗೂ ಕೃತ್ಯಕ್ಕೆ ಬಳಸಿದ್ದ ಸುಮಾರು 1 ಲಕ್ಷ ಮೌಲ್ಯದ ಬೈಕ್‌ನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಆರೋಪಿಯ ವಿರುದ್ಧ ಬದಿಯಡ್ಕ ಪೊಲೀಸ್ ಠಾಣೆಯಲ್ಲೂ ಅಡಿಕೆ ಕಳವು ಪ್ರಕರಣ ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ.ಕಾರ್ಯಾಚರಣೆಯನ್ನು ಪುತ್ತೂರು ಉಪವಿಭಾಗದ ಡಿವೈಎಸ್‌ಪಿ ಪ್ರಮೋದ್ ಕುಮಾರ್ ಅವರ ನಿರ್ದೇಶನದಲ್ಲಿ, ಪುತ್ತೂರು ಗ್ರಾಮಾಂತರ ಠಾಣೆಯ ಪ್ರಭಾರ ನಿರೀಕ್ಷಕ ತಿಮ್ಮಪ್ಪ ನಾಯ್ಕ್ ಅವರ ಮಾರ್ಗದರ್ಶನದಲ್ಲಿ ಪಿಎಸ್ಐಗಳಾದ ಗುಣಪಾಲ ಜೆ. ಹಾಗೂ ಸುಷ್ಮಾ ಜಿ. ಭಂಡಾರಿ ನೇತೃತ್ವದ ತಂಡ ನಡೆಸಿದೆ. ಅಪರಾಧ ವಿಭಾಗದ ಸಿಬ್ಬಂದಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಿಡಿಆರ್ ವಿಭಾಗದ ಸಿಬ್ಬಂದಿ ಕಾರ್ಯಾಚರಣೆಗೆ ಸಹಕರಿಸಿದ್ದಾರೆ.


0 Comments