ಪುತ್ತೂರು: ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಗಳಿಗೆ ಅವಾಚ್ಯವಾಗಿ ನಿಂದಿಸಿ, ಹಲ್ಲೆ ನಡೆಸಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಮೂವರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆಪ್ಟೆಂಬರ್ 4ರಂದು ರಾತ್ರಿ ಪುತ್ತೂರು ಗ್ರಾಮಾಂತರ ಠಾಣೆಯ ಹೆಚ್.ಸಿ. ಮಧು ಹಾಗೂ ಸಿಪಿಸಿ ಭೀಮನ ಗೌಡ ಎಂ. ಬಿರಾದರ್ ಅವರು ಹೊಯ್ಸಳ ವಾಹನದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಬಂದ ದೂರಿನ ಮೇರೆಗೆ ಪುತ್ತೂರು ಪಡ್ನೂರು ಗ್ರಾಮದ ಮುಂಡಾಜೆಗೆ ತೆರಳಿದ್ದರು.ಅಲ್ಲಿ ಮಹಿಳೆಯೊಬ್ಬರು ತನ್ನ ಪತಿ ಹಲ್ಲೆ ನಡೆಸಿರುವುದಾಗಿ ಪೊಲೀಸರಿಗೆ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ನವೀನ್ ಎಂಬವರ ಬಳಿ ವಿಚಾರಣೆ ನಡೆಸುತ್ತಿದ್ದಾಗ, ಅವರು ಕೋಪಗೊಂಡು ಪತ್ನಿಯ ಮೇಲೆ ಮತ್ತೆ ಹಲ್ಲೆ ನಡೆಸಲು ಮುಂದಾಗಿದ್ದಾರೆ ಎನ್ನಲಾಗಿದೆ.ಈ ವೇಳೆ ತಡೆಯಲು ಮುಂದಾದ ಪೊಲೀಸ್ ಸಿಬ್ಬಂದಿಗಳೊಂದಿಗೆ ನವೀನ್, ಅವರ ತಾಯಿ ಹಾಗೂ ಸಹೋದರ ಅವಾಚ್ಯವಾಗಿ ನಿಂದಿಸಿ, ಹಲ್ಲೆ ನಡೆಸಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.ಈ ಸಂಬಂಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಪ್ರಕರಣದ ಆರೋಪಿಯಾಗಿರುವ ನವೀನ್ ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಪೂರ್ಣಗೊಂಡು ಬಿಡುಗಡೆಯಾದ ಬಳಿಕ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

0 Comments