ಮಂಜೇಶ್ವರ : ವಿಟ್ಲ ಠಾಣಾ ವ್ಯಾಪ್ತಿಉ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಕಾಲೇಜಿನಲ್ಲಿ ತೀವ್ರ ಹೊಟ್ಟೆನೋವಿನಿಂದ ಬಳಲಿದ ಬಳಿಕ ಆಸ್ಪತ್ರೆಗೆ ದಾಖಲಾಗಿ ಪ್ರಸವಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸರು ದಾಖಲಿಸಿದ್ದ ಪೋಕ್ಸೋ ಪ್ರಕರಣವನ್ನು ಮಂಜೇಶ್ವರ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ.
ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ನಡೆದಿರುವುದು ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಕಟ್ಟಡವೊಂದರಲ್ಲಿ ಎಂಬುದು ತನಿಖೆಯಲ್ಲಿ ಪತ್ತೆಯಾದ ಹಿನ್ನೆಲೆಯಲ್ಲಿ ಪ್ರಕರಣವನ್ನು ಮಂಜೇಶ್ವರ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.
ಪ್ರಕರಣದ ಆರೋಪಿ ವಿದ್ಯಾರ್ಥಿನಿಯ ಸಂಬಂಧಿಯಾಗಿದ್ದು, ಮಂಜೇಶ್ವರ ನಿವಾಸಿಯಾಗಿರುವ ಅಪ್ರಾಪ್ತ ಬಾಲಕನಾಗಿದ್ದಾನೆ. ಸೆಪ್ಟೆಂಬರ್ 8ರಂದು ಕಾಲೇಜಿಗೆ ಆಗಮಿಸಿದ್ದ ವಿದ್ಯಾರ್ಥಿನಿಗೆ ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿತ್ತು. ಕಾಲೇಜು ಅಧಿಕೃತರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. ವೈದ್ಯಕೀಯ ಪರೀಕ್ಷೆಯಲ್ಲಿ ವಿದ್ಯಾರ್ಥಿನಿ ಪೂರ್ಣ ಗರ್ಭಿಣಿಯಾಗಿರುವುದು ದೃಢಪಟ್ಟಿದ್ದು, ಅದೇ ದಿನ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.
ಆಸ್ಪತ್ರೆ ಅಧಿಕೃತರು ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಪೊಲೀಸರು ಸ್ಥಳಕ್ಕೆ ತೆರಳಿ ವಿದ್ಯಾರ್ಥಿನಿಯಿಂದ ಮಾಹಿತಿ ಹಾಗೂ ಹೇಳಿಕೆ ದಾಖಲಿಸಿಕೊಂಡಿದ್ದರು. ಬಳಿಕ ವಿದ್ಯಾರ್ಥಿನಿಯ ಹೇಳಿಕೆಯ ಆಧಾರದ ಮೇಲೆ ಅಪ್ರಾಪ್ತ ವಯಸ್ಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು.
ವಿದ್ಯಾರ್ಥಿನಿ ಮತ್ತು ಆರೋಪಿ ಪರಸ್ಪರ ಪರಿಚಿತರಾಗಿದ್ದು, ಸ್ನೇಹ ಹೊಂದಿದ್ದರು ಎನ್ನಲಾಗಿದೆ. ಈ ನಡುವೆ ವಿದ್ಯಾರ್ಥಿನಿಯನ್ನು ಮಂಜೇಶ್ವರಕ್ಕೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಪ್ರಕರಣದ ತನಿಖೆಯನ್ನು ಇದೀಗ ಮಂಜೇಶ್ವರ ಪೊಲೀಸರು ಕೈಗೆತ್ತಿಕೊಂಡಿದ್ದಾರೆ.

0 Comments