ಮಂಗಳೂರು: ಮತದಾರರ ಹಕ್ಕಿನೊಂದಿಗೆ ಯಾವುದೇ ರೀತಿಯ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ. ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಹಲವು ಪ್ರಶ್ನೆಗಳು ಎದುರಾಗಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ವಿಶ್ವಾಸಾರ್ಹತೆಯನ್ನು ಕಾಪಾಡುವ ನೈತಿಕ ಹೊಣೆಗಾರಿಕೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮೇಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷ ದಿನೇಶ್ ಮೂಳೂರು ಹೇಳಿದ್ದಾರೆ.
ಚುನಾವಣಾ ಆಯೋಗದ ಇಬ್ಬರು ಚುನಾವಣಾ ಆಯುಕ್ತರು ಮತದಾರರ ಹೆಸರುಗಳ ಸೇರ್ಪಡೆ, ತೆಗೆದುಹಾಕುವಿಕೆ ಹಾಗೂ ಚುನಾವಣಾ ಮಾಹಿತಿಯ ನಿರ್ವಹಣೆಗೆ ಸಂಬಂಧಿಸಿದ ನಿರ್ಧಾರಗಳ ಕುರಿತು ಆಕ್ಷೇಪಣೆ ದಾಖಲಿಸಿದ್ದಾರೆ ಎಂಬ ವರದಿಗಳು ಬಂದಿವೆ. ಈ ಬೆಳವಣಿಗೆಗಳು ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯ ಕುರಿತು ಪ್ರಶ್ನೆಗಳನ್ನು ಹುಟ್ಟುಹಾಕಿವೆ ಎಂದು ಅವರು ಹೇಳಿದ್ದಾರೆ.
ಪಶ್ಚಿಮ ಬಂಗಾಳದ SIR ಪ್ರಕ್ರಿಯೆಯಲ್ಲಿ ಮತದಾರರ ಹೆಸರುಗಳ ಅಳಿಸುವಿಕೆ ಹಾಗೂ ಮೇಲ್ಮನವಿ ಪ್ರಕ್ರಿಯೆ ಕುರಿತು ಚುನಾವಣಾ ಆಯೋಗವು ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿರುವುದನ್ನೂ ದಿನೇಶ್ ಮೂಳೂರು ಉಲ್ಲೇಖಿಸಿದ್ದಾರೆ.
“ಅರ್ಹ ನಾಗರಿಕನ ಮತದಾನದ ಹಕ್ಕಿಗೆ ಯಾವುದೇ ರೀತಿಯಲ್ಲಿ ಧಕ್ಕೆಯಾಗಬಾರದು. ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಅಥವಾ ತೆಗೆದುಹಾಕುವ ಪ್ರಕ್ರಿಯೆ ಪಾರದರ್ಶಕವಾಗಿರಬೇಕು. ಚುನಾವಣಾ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸಕ್ಕೆ ಧಕ್ಕೆ ತರುವಂತಹ ಯಾವುದೇ ಬೆಳವಣಿಗೆಗಳನ್ನು ಗಂಭೀರವಾಗಿ ಪರಿಗಣಿಸಬೇಕು” ಎಂದು ಅವರು ತಿಳಿಸಿದ್ದಾರೆ.
ಚುನಾವಣಾ ಆಯೋಗವು ಸ್ವತಂತ್ರ ಹಾಗೂ ಸಂವಿಧಾನಾತ್ಮಕ ಸಂಸ್ಥೆಯಾಗಿದ್ದು, ಚುನಾವಣಾ ಪ್ರಕ್ರಿಯೆಯ ಮೇಲಿನ ಜನರ ವಿಶ್ವಾಸವೇ ಅದರ ಪ್ರಮುಖ ಆಧಾರವಾಗಿದೆ. ಈ ಹಿನ್ನೆಲೆಯಲ್ಲಿ SIR ಸೇರಿದಂತೆ ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದಂತೆ ಎದ್ದಿರುವ ಪ್ರಶ್ನೆಗಳಿಗೆ ಆಯೋಗವು ಪಾರದರ್ಶಕವಾಗಿ ಉತ್ತರ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
“ಚುನಾವಣಾ ಆಯೋಗದ ಮೇಲಿನ ವಿಶ್ವಾಸಕ್ಕೆ ಧಕ್ಕೆ ಬಂದರೆ ಅದರ ಪರಿಣಾಮ ಇಡೀ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ಬೀರುತ್ತದೆ. ಆದ್ದರಿಂದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ನೈತಿಕ ಹೊಣೆಗಾರಿಕೆ ವಹಿಸಿಕೊಂಡು ರಾಜೀನಾಮೆ ನೀಡಬೇಕು” ಎಂದು ದಿನೇಶ್ ಮೂಳೂರು ಒತ್ತಾಯಿಸಿದ್ದಾರೆ.
“ಮತದಾರರ ಹಕ್ಕು ಯಾವುದೇ ಸರ್ಕಾರ, ಪಕ್ಷ ಅಥವಾ ಅಧಿಕಾರಿಗಿಂತ ದೊಡ್ಡದು. ಮತದಾರರ ಹಕ್ಕುಗಳ ರಕ್ಷಣೆ ಹಾಗೂ ಚುನಾವಣಾ ಪ್ರಕ್ರಿಯೆಯ ಸಂಪೂರ್ಣ ಪಾರದರ್ಶಕತೆಯನ್ನು ಖಚಿತಪಡಿಸಬೇಕು” ಎಂದು ಅವರು ಹೇಳಿದ್ದಾರೆ.

0 Comments