ಮಂಗಳೂರು : ನ್ಯಾಯಾಲಯದ ವಿಚಾರಣೆಗೆ 13 ವರ್ಷಗಳಿಂದ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಮಹಿಳಾ ಪೊಲೀಸರು ಪುತ್ತೂರಿನಲ್ಲಿ ಬಂಧಿಸಿದ್ದಾರೆ.
ಬಂಧಿತನನ್ನು ಮಂಗಳೂರಿನ ಕೆ.ಎಂ.ಸಿ. ಆಸ್ಪತ್ರೆ ಸಮೀಪದ ಪಾರ್ಕ್ ಅಪಾರ್ಟ್‌ಮೆಂಟ್ ನಿವಾಸಿ ಹಸನ್ ಶಬೀರ್ (41) ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ 2013ರಲ್ಲಿ ಪ್ರಕರಣ ದಾಖಲಾಗಿತ್ತು. ಭಾರತೀಯ ದಂಡ ಸಂಹಿತೆ ಹಾಗೂ ವರದಕ್ಷಿಣೆ ನಿಷೇಧ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಮಂಗಳೂರಿನ ಮೂರನೇ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಆರೋಪಿಯ ಹಾಜರಾತಿಗಾಗಿ ನ್ಯಾಯಾಲಯವು ಸುಮಾರು 37 ಬಾರಿ ವಾರಂಟ್ ಹೊರಡಿಸಿತ್ತು. ಆದರೂ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೆ ವಿಳಾಸ ಬದಲಾಯಿಸಿಕೊಂಡು ತಲೆಮರೆಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
2026ರ ಅಕ್ಟೋಬರ್ 9ರಂದು ಪುತ್ತೂರಿನ ಇನ್‌ಲ್ಯಾಂಡ್ ಅಪಾರ್ಟ್‌ಮೆಂಟ್‌ನಲ್ಲಿ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು, ಮಂಗಳೂರು ಮಹಿಳಾ ಪೊಲೀಸ್ ಠಾಣೆಗೆ ಕರೆತಂದರು. ಬಳಿಕ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಲಯವು ಅಕ್ಟೋಬರ್ 17ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
ಮೇಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಮಹಿಳಾ ಪೊಲೀಸ್ ಠಾಣೆಯ ಡಬ್ಲ್ಯುಪಿಎಸ್‌ಐ ಜ್ಯೋತಿ, ಪಿಎಸ್‌ಐ ಸುರೇಶ್ ಹಾಗೂ ಸಿಬ್ಬಂದಿಗಳಾದ ಶಶಿಧರ ಶೆಟ್ಟರ್ ಮತ್ತು ಶಶಿಧರ ದೊಡ್ಡಮನಿ ಆರೋಪಿಯ ಪತ್ತೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

0 Comments