ಮೂಡುಬಿದಿರೆ : ತಾಲೂಕಿನ ಪಾಲಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವರ್ಣಬೆಟ್ಟುವಿನಲ್ಲಿ ಸಂಭವಿಸಿದ ವಿದ್ಯುತ್ ಅವಘಡದಲ್ಲಿ ತಾಯಿ ಹಾಗೂ ಮಗ ಮೃತಪಟ್ಟಿದ್ದಾರೆ. ಮರ್ಸಿ ಮಸ್ಕರೇನಸ್ (45) ಮತ್ತು ಅವರ ಪುತ್ರ ಶೋನ್ ಮಸ್ಕರೇನಸ್ (18) ಮೃತರು.
ಗುರುವಾರ ಬೆಳಗ್ಗೆ ಮನೆಯ ಹೊರಗಡೆ ಬಟ್ಟೆ ಒಣಗಿಸಲು ತೆರಳಿದ್ದ ಶೋನ್‌ಗೆ ವಿದ್ಯುತ್ ಆಘಾತ ತಗುಲಿದೆ ಎನ್ನಲಾಗಿದೆ. ಆತನನ್ನು ರಕ್ಷಿಸಲು ಧಾವಿಸಿದ ತಾಯಿ ಮರ್ಸಿ ಅವರಿಗೂ ವಿದ್ಯುತ್ ಪ್ರವಹಿಸಿ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೂಡುಬಿದಿರೆಯ ಹೋಲಿ ರೋಸರಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಯಾಗಿದ್ದ ಶೋನ್, ಮನೆಯ ಹೊರಭಾಗದಲ್ಲಿ ಬಟ್ಟೆ ಒಣಗಿಸಲು ಹಾಕಲಾಗಿದ್ದ ಕಬ್ಬಿಣದ ತಂತಿಗೆ ಹೈಟೆನ್ಷನ್ ವಿದ್ಯುತ್ ತಂತಿಯ ಸಂಪರ್ಕ ಉಂಟಾದ ಪರಿಣಾಮ ವಿದ್ಯುತ್ ಆಘಾತಕ್ಕೊಳಗಾಗಿರಬಹುದು ಎಂದು ಶಂಕಿಸಲಾಗಿದೆ.
ಬೆಳಗ್ಗೆ ಸುಮಾರು 7ರಿಂದ 8 ಗಂಟೆಯ ನಡುವೆ ತೋಟದ ಕೆಲಸಕ್ಕಾಗಿ ಮನೆಗೆ ಬಂದ ಕಾರ್ಮಿಕರೊಬ್ಬರು ತಾಯಿ-ಮಗ ಗಾಯಗೊಂಡ ಸ್ಥಿತಿಯಲ್ಲಿ ಬಿದ್ದಿರುವುದನ್ನು ಗಮನಿಸಿ ಸ್ಥಳೀಯರಿಗೆ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ಪಡೆದ ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

0 Comments