ನವದೆಹಲಿ : ಎಸ್ಐಆರ್ ಪ್ರಕ್ರಿಯೆಯಲ್ಲಿನ ಅಕ್ರಮಗಳನ್ನು ಆರೋಪಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ‘ಪೀಪಲ್ ಎಗೇನ್ಸ್ಟ್ ಎಸ್ಐಆರ್’ ಸಂಘಟನೆ ದೇಶವ್ಯಾಪಿ ಪ್ರತಿಭಟನೆಗೆ ಮುಂದಾಗಿದೆ.
ನೂರಕ್ಕೂ ಹೆಚ್ಚು ಸಂಘಟನೆಗಳ ಒಕ್ಕೂಟವಾಗಿರುವ ‘ಪೀಪಲ್ ಎಗೇನ್ಸ್ಟ್ ಎಸ್ಐಆರ್’, ಅಕ್ಟೋಬರ್ 23ರಂದು ಶುಕ್ರವಾರ ಕಾರ್ಮಿಕ ಸಂಘಟನೆಗಳು, ವಿದ್ಯಾರ್ಥಿಗಳು, ರೈತ ಸಂಘಟನೆಗಳು ಹಾಗೂ ಅಲ್ಪಸಂಖ್ಯಾತ ಸಂಘಟನೆಗಳನ್ನು ಒಗ್ಗೂಡಿಸಿ ಪ್ರತಿಭಟನಾ ಮೆರವಣಿಗೆ ನಡೆಸಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮುಖ್ಯ ಚುನಾವಣಾ ಆಯುಕ್ತರ ಸಾಂವಿಧಾನಿಕ ಹುದ್ದೆಯನ್ನು ವೈಯಕ್ತಿಕ ಹಿತಾಸಕ್ತಿಗಳಿಗಾಗಿ ಬಳಸಿಕೊಳ್ಳಲು ಮುಂದಾಗಿದ್ದಾರೆ ಎಂದು ಸಂಘಟನೆ ಆರೋಪಿಸಿದೆ.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು, ಎಸ್ಐಆರ್ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು, ಮತದಾರರ ಪಟ್ಟಿಯಿಂದ ಕೈಬಿಡಲಾದ ಹೆಸರುಗಳನ್ನು ಮರುಸೇರ್ಪಡೆಗೊಳಿಸಬೇಕು ಎಂಬುದು ಸಂಘಟನೆಯ ಪ್ರಮುಖ ಬೇಡಿಕೆಗಳಾಗಿವೆ.
ಇದಲ್ಲದೆ, ಚುನಾವಣಾ ಆಯುಕ್ತರಿಗೆ ಕಾನೂನು ರಕ್ಷಣೆ ಒದಗಿಸುವ 2023ರ ಚುನಾವಣಾ ಆಯುಕ್ತರ ಕಾಯ್ದೆಯನ್ನು ರದ್ದುಗೊಳಿಸಬೇಕು, ಪಾರದರ್ಶಕ ಪ್ರಕ್ರಿಯೆಯ ಮೂಲಕ ಹೊಸ ಚುನಾವಣಾ ಆಯುಕ್ತರನ್ನು ನೇಮಕ ಮಾಡಬೇಕು ಹಾಗೂ ಮತಪತ್ರದ ಮೂಲಕ ಮತದಾನ ವ್ಯವಸ್ಥೆಯನ್ನು ಮರುಜಾರಿಗೆ ತರಬೇಕು ಎಂದು ಒತ್ತಾಯಿಸಲಾಗಿದೆ.
ಅಕ್ಟೋಬರ್ 14ರಂದು ನಡೆದ ಜಂಟಿ ಸಭೆಯ ಬಳಿಕ ಪ್ರತಿಭಟನೆ ನಡೆಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಪ್ರತಿಭಟನೆಗೆ ಬೆಂಬಲ ನೀಡುವಂತೆ ‘ಇಂಡಿಯಾ’ ಮೈತ್ರಿಕೂಟಕ್ಕೂ ಮನವಿ ಮಾಡಲಾಗಿದೆ.
ನಟ ಪ್ರಕಾಶ್ ರಾಜ್, ಸುಪ್ರೀಂ ಕೋರ್ಟ್ ವಕೀಲ ಪ್ರಶಾಂತ್ ಭೂಷಣ್, ಲೇಖಕ ಪರಕಾಲ ಪ್ರಭಾಕರ್, ರೈತ ನಾಯಕ ರಾಕೇಶ್ ಟಿಕಾಯತ್, ಎಐಎಸ್ಎ ಅಧ್ಯಕ್ಷೆ ನೇಹಾ ಬೋರಾ ಹಾಗೂ ಎಸ್ಎಫ್ಐ ನಾಯಕಿ ಐಶೆ ಘೋಷ್ ಸೇರಿದಂತೆ ಹಲವು ಪ್ರಮುಖರು ಈ ಸಂಘಟನೆಯ ಮುಂಚೂಣಿಯಲ್ಲಿದ್ದಾರೆ.

0 Comments