ಚಿಕ್ಕಮಗಳೂರು : ಭೂತ ಹಾಗೂ ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಯೊಬ್ಬರ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪದ ಮೇಲೆ ಸತೀಶ್ ಪಾತ್ರಿ ಎಂಬಾತನನ್ನು ಕೊಪ್ಪ ಪೊಲೀಸರು ಬೆಂಗಳೂರಿನ ಜೆ.ಪಿ. ನಗರದಲ್ಲಿ ಬಂಧಿಸಿದ್ದಾರೆ.
ಹಾಸನ ಮೂಲದ ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಘಟನೆ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಗಾಗಿ ಶೋಧ ನಡೆಸಿದ ಪೊಲೀಸರು, ಇದೀಗ ಆತನನ್ನು ವಶಕ್ಕೆ ಪಡೆದಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಮೇಕನಹಡ್ಲು ಗ್ರಾಮದ ದುರ್ಗಾಪರಮೇಶ್ವರಿ ದೇವಸ್ಥಾನದ ಸಮೀಪ ಹಾಗೂ ತೀರ್ಥಹಳ್ಳಿಯ ಕುದುರೆಗುಂಡಿಗೆ ಕರೆದೊಯ್ದು ತನ್ನ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ. ಈ ಸಂಬಂಧ ಕೊಪ್ಪ ಹಾಗೂ ಎನ್.ಆರ್. ಪುರ ಪೊಲೀಸ್ ಠಾಣೆಗಳಲ್ಲಿ ದೂರು ನೀಡಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್.ಆರ್. ಪುರ ಪೊಲೀಸ್ ಠಾಣೆಯಲ್ಲಿ ಮೂಢನಂಬಿಕೆ ಪ್ರತಿಬಂಧಕ ಕಾಯ್ದೆಯಡಿ ಹಾಗೂ ಕೊಪ್ಪ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ಇದೇ ಆರೋಪಿಯ ವಿರುದ್ಧ ಈ ಹಿಂದೆ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಭೂತ ಬಿಡಿಸುವ ನೆಪದಲ್ಲಿ ಬಲವಂತವಾಗಿ ಕೋಳಿ ರಕ್ತ ಕುಡಿಸಿದ ಆರೋಪವೂ ಕೇಳಿಬಂದಿತ್ತು. ಈ ಕೃತ್ಯದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಬಳಿಕ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

0 Comments