ಮಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದ ವತಿಯಿಂದ ಐದನೇ ವರ್ಷದ ದಸರಾ ದರ್ಶನ ವಿಶೇಷ ಪ್ರವಾಸ ಪ್ಯಾಕೇಜ್ ಅಕ್ಟೋಬರ್ 11ರಿಂದ ಆರಂಭವಾಗಲಿದೆ.
ಅಂದು ಬೆಳಿಗ್ಗೆ 6.30ಕ್ಕೆ ಮಂಗಳೂರು ಬಸ್ ನಿಲ್ದಾಣದ ಗಣಪತಿ ದೇವಸ್ಥಾನದ ಬಳಿ ಯಾತ್ರಾರ್ಥಿಗಳು ಹಾಗೂ ಕೆಎಸ್‌ಆರ್‌ಟಿಸಿ ಅಧಿಕಾರಿಗಳ ಸಮ್ಮುಖದಲ್ಲಿ ಸಾಂಕೇತಿಕ ಪೂಜೆ ಸಲ್ಲಿಸುವ ಮೂಲಕ ಪ್ರವಾಸಕ್ಕೆ ಚಾಲನೆ ನೀಡಲಾಗುವುದು.
ದಸರಾ ದರ್ಶನದ ಅಂಗವಾಗಿ ಮಂಗಳೂರು, ಶೃಂಗೇರಿ, ಮಡಿಕೇರಿ, ಕೊಲ್ಲೂರು ಹಾಗೂ ಸಿಗಂದೂರು ಸೇರಿದಂತೆ ಐದು ವಿಶೇಷ ಪ್ರವಾಸ ಪ್ಯಾಕೇಜ್‌ಗಳನ್ನು ರೂಪಿಸಲಾಗಿದೆ.
ಮಂಗಳೂರು ಪ್ಯಾಕೇಜ್‌ನಲ್ಲಿ ಮರೋಳಿ ಸೂರ್ಯನಾರಾಯಣ ದೇವಸ್ಥಾನ, ಬೋಳಾರು ಮಾರಿಯಮ್ಮ ದೇವಸ್ಥಾನ, ಶ್ರೀ ಮಂಗಳಾದೇವಿ ದೇವಸ್ಥಾನ, ಪೊಳಲಿ ರಾಜರಾಜೇಶ್ವರಿ ದೇವಸ್ಥಾನ, ಕೊಡ್ಯಡ್ಕ ಅನ್ನಪೂರ್ಣೇಶ್ವರಿ ದೇವಸ್ಥಾನ, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನ, ಚಿತ್ತಾಪುರದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಊರ್ವ ಮಾರಿಯಮ್ಮ ದೇವಸ್ಥಾನ ಹಾಗೂ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಗಳಿಗೆ ಭೇಟಿ ನೀಡಲು ಅವಕಾಶವಿದೆ.
ಶೃಂಗೇರಿ ಪ್ಯಾಕೇಜ್‌ನಲ್ಲಿ ಕೊಡ್ಯಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ, ಶೃಂಗೇರಿ ಶಾರದಾಂಬೆ ದೇವಸ್ಥಾನ, ಹರಿಹರಪುರ ಮಠ ಹಾಗೂ ಋಷ್ಯಶೃಂಗ ಸ್ವಾಮಿ ದೇವಸ್ಥಾನಗಳ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಮಡಿಕೇರಿ ಪ್ಯಾಕೇಜ್‌ನಲ್ಲಿ ಭಾಗಮಂಡಲದ ಭಗಂಡೇಶ್ವರ ದೇವಸ್ಥಾನ, ತಲಕಾವೇರಿ, ಅಬ್ಬಿ ಜಲಪಾತ, ರಾಜಾಸೀಟ್ ಹಾಗೂ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಗಳಿಗೆ ಭೇಟಿ ನೀಡಲಾಗುವುದು.
ಕೊಲ್ಲೂರು ಪ್ಯಾಕೇಜ್‌ನಲ್ಲಿ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನ, ಕಾಪು ಮಾರಿಗುಡಿ, ಮಂದಾರ್ತಿ ದುರ್ಗಾಪರಮೇಶ್ವರಿ ದೇವಸ್ಥಾನ, ಕಮಲಶಿಲೆ ದುರ್ಗಾಪರಮೇಶ್ವರಿ ದೇವಸ್ಥಾನ, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಹಾಗೂ ಮಾರಣಕಟ್ಟೆ ಬ್ರಹ್ಮಲಿಂಗೇಶ್ವರ ದೇವಸ್ಥಾನಗಳ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಸಿಗಂದೂರು ಪ್ಯಾಕೇಜ್‌ನಲ್ಲಿ ಸಿಗಂದೂರು ಚೌಡೇಶ್ವರಿ ದೇವಸ್ಥಾನ ಹಾಗೂ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಭೇಟಿ ನೀಡಬಹುದು.
ದಸರಾ ಹಬ್ಬದ ಸಂದರ್ಭದಲ್ಲಿ ಭಕ್ತರು ಹಾಗೂ ಪ್ರವಾಸಿಗರು ಪ್ರಮುಖ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಲು ಅನುಕೂಲವಾಗುವಂತೆ ಈ ವಿಶೇಷ ಪ್ರವಾಸ ಪ್ಯಾಕೇಜ್‌ಗಳನ್ನು ರೂಪಿಸಲಾಗಿದೆ. ಪ್ರವಾಸದ ಆರಂಭದ ಕಾರ್ಯಕ್ರಮಕ್ಕೆ ದೃಶ್ಯ ಮಾಧ್ಯಮ ಹಾಗೂ ಮುದ್ರಣ ಮಾಧ್ಯಮದ ಪತ್ರಕರ್ತರು ಆಗಮಿಸಿ ಸಹಕರಿಸುವಂತೆ ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳು ಹಾಗೂ ಅಧಿಕಾರಿಗಳ ವೃಂದ ಮನವಿ ಮಾಡಿದೆ.
.png)
0 Comments