Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಮಂಗಳೂರು ನಗರದಲ್ಲಿಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ

ಮಂಗಳೂರು : ನಗರದಲ್ಲಿ ನಡೆದ ಎರಡು ಮನೆ ಕಳ್ಳತನ ಪ್ರಕರಣಗಳನ್ನು ಕ್ಷಿಪ್ರವಾಗಿ ಪತ್ತೆಹಚ್ಚಿದ ಮಂಗಳೂರು ನಗರ ಪೊಲೀಸರು, ದೆಹಲಿ ಮೂಲದ ಇಬ್ಬರು ಕುಖ್ಯಾತ ಮನೆಗಳ್ಳರನ್ನು ಗುಜರಾತ್‌ನ ವಡೋದರಾದಲ್ಲಿ ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು 18 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.ಈಶಾನ್ಯ ದೆಹಲಿಯ ಅರ್ಮಾನ್ ಖಾನ್ ಯಾನೆ ಅಮನ್ ಸೋನಿ (34) ಹಾಗೂ ನವದೆಹಲಿ ಸುಲ್ತಾನ್ ಪುರಿಯ ಸಂಜೀವ್ ಕುಮಾರ್ ಯಾನೆ ಜಾನಿ (34)ಬಂಧಿತ ಆರೋಪಿಗಳು.

ಸೆ.28ರಂದು ಅಳಕೆ ಕಂಬ್ಲ ಕ್ರಾಸ್ ರಸ್ತೆಯ ಸಹಯೋಗ ರೆಸಿಡೆನ್ಸಿ ಕಾಂಪ್ಲೆಕ್ಸ್‌ನ ಮನೆಯೊಂದಕ್ಕೆ ಬೀಗ ಹಾಕಿಕೊಂಡು ಮನೆಯವರು ಮಾರುಕಟ್ಟೆಗೆ ತೆರಳಿದ್ದರು. ಸಂಜೆ 5.10ರ ಸುಮಾರಿಗೆ ವಾಪಸ್ ಬಂದಾಗ ಮನೆಯ ಮುಂಭಾಗದ ಬಾಗಿಲಿನ ಕೊಂಡಿ ಮುರಿದು ಕಳ್ಳರು ಒಳನುಗ್ಗಿರುವುದು ಪತ್ತೆಯಾಗಿತ್ತು. ಮನೆಯಿಂದ ಸುಮಾರು ₹14 ಲಕ್ಷ ಮೌಲ್ಯದ ಚಿನ್ನಾಭರಣ, ನಗದು, ವಾಚ್ ಹಾಗೂ ಟ್ರಾಲಿ ಬ್ಯಾಗ್ ಕಳವು ಮಾಡಲಾಗಿತ್ತು. ಈ ಕುರಿತು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದೇ ವೇಳೆ ಸೆ.27ರಂದು ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಬೊಕ್ಕಪಾಟ್ನ ರಸ್ತೆಯ ಮನೆಯೊಂದರಲ್ಲಿ ಲಾಕರ್ ಒಡೆದು ಕಳ್ಳತನಕ್ಕೆ ಯತ್ನಿಸಲಾಗಿತ್ತು. ಬೆಲೆಬಾಳುವ ವಸ್ತುಗಳು ಸಿಗದ ಹಿನ್ನೆಲೆಯಲ್ಲಿ ಚೆಕ್ ಪುಸ್ತಕಗಳನ್ನು ಕಳವು ಮಾಡಲಾಗಿತ್ತು. ಈ ಕುರಿತು ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣಗಳ ತನಿಖೆ ನಡೆಸಿದ ಪೊಲೀಸರು, ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಿ ಆರೋಪಿಗಳ ಚಲನವಲನದ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಮನೆ ಕಳ್ಳತನದ ಬಳಿಕ ಆರೋಪಿಗಳು ರೈಲಿನಲ್ಲಿ ದೆಹಲಿ ಕಡೆಗೆ ತೆರಳುತ್ತಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ ಗುಜರಾತ್ ಪೊಲೀಸರ ಸಹಕಾರ ಪಡೆಯಲಾಯಿತು.

ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸ್ ತಂಡವು ಪ್ರಕರಣ ದಾಖಲಾಗಿದ್ದ 24 ಗಂಟೆಗಳೊಳಗೆ, ಸೆ.29ರಂದು ವಡೋದರಾದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಯಿತು. ಆರೋಪಿಗಳಿಂದ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅದರ ಒಟ್ಟು ಮೌಲ್ಯ ಸುಮಾರು ₹18 ಲಕ್ಷ ಎಂದು ಅಂದಾಜಿಸಲಾಗಿದೆ.

ಬಂಧಿತರನ್ನು ವಡೋದರಾದಿಂದ ಮಂಗಳೂರಿಗೆ ಕರೆತಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತರ ಪೈಕಿ ಅರ್ಮಾನ್ ಖಾನ್ ವಿರುದ್ಧ ದೆಹಲಿ, ಮುಂಬೈ, ಬೆಂಗಳೂರು, ಗೋವಾ ಹಾಗೂ ಹೈದರಾಬಾದ್ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ 40ಕ್ಕೂ ಅಧಿಕ ಮನೆಕಳ್ಳತನ ಪ್ರಕರಣಗಳು ದಾಖಲಾಗಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಆತನ ವಿರುದ್ಧ ವಾರಂಟ್ ಹಾಗೂ ಪ್ರೊಕ್ಲಮೇಶನ್ ಬಾಕಿ ಇರುವ ಮಾಹಿತಿಯನ್ನೂ ಸಂಬಂಧಪಟ್ಟ ಪೊಲೀಸ್ ಠಾಣೆಗಳಿಗೆ ನೀಡಲಾಗಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ವಿಶೇಷ ತಂಡ ಈ ಕಾರ್ಯಾಚರಣೆ ನಡೆಸಿದೆ.

Post a Comment

0 Comments

ಜಾಹೀರಾತು

Responsive Advertisement