Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ₹50 ಸಾವಿರ ದಂಡ

ಪುತ್ತೂರು: ಅಪ್ರಾಪ್ತ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ಎಸಗಿದ ಹಾಗೂ ಬೆದರಿಕೆ ಹಾಕಿದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪುತ್ತೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವುದು) 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ಒಟ್ಟು 50 ಸಾವಿರ ರೂ. ದಂಡ ವಿಧಿಸಿ ತೀರ್ಪು ಪ್ರಕಟಿಸಿದೆ.

ಶಿಕ್ಷೆಗೊಳಗಾದ ಆರೋಪಿಯನ್ನು ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿ ರವಿ ಅಲಿಯಾಸ್ ರವೀಂದ್ರ ಆಚಾರ್ಯ (32) ಎಂದು ಗುರುತಿಸಲಾಗಿದೆ. ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಅಪ್ರಾಪ್ತ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ಎಸಗಿದ ಬಳಿಕ ಬೆದರಿಕೆ ಹಾಕಿದ ಆರೋಪದಡಿ ಆತನ ವಿರುದ್ಧ 2018ರಲ್ಲಿ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಅಂದಿನ ಉಪ್ಪಿನಂಗಡಿ ಪೊಲೀಸ್ ವೃತ್ತ ನಿರೀಕ್ಷಕ ಡಿ. ಮಂಜುನಾಥ್ ಅವರು ಪ್ರಕರಣದ ತನಿಖೆ ನಡೆಸಿ ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ಸುಮಂಗಲ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ಪೋಕ್ಸೋ ಕಾಯ್ದೆ 2012ರ ಸೆಕ್ಷನ್ 5(ಎಲ್) ಜೊತೆಗೆ ಸೆಕ್ಷನ್ 6ರ ಅಡಿಯಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿಯಾಗಿ ಒಂದು ವರ್ಷ ಕಠಿಣ ಜೈಲು ಶಿಕ್ಷೆ ಅನುಭವಿಸಬೇಕು ಎಂದು ಆದೇಶಿಸಿದ್ದಾರೆ.

ಇದಲ್ಲದೆ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 506ರ ಅಡಿಯಲ್ಲಿ ಒಂದು ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿಯಾಗಿ ಒಂದು ವರ್ಷ ಕಠಿಣ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ. ಎರಡೂ ಶಿಕ್ಷೆಗಳನ್ನು ಏಕಕಾಲದಲ್ಲಿ ಜಾರಿಗೊಳಿಸುವಂತೆ ನ್ಯಾಯಾಲಯ ಆದೇಶಿಸಿದೆ.

ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಪುಷ್ಪರಾಜ್ ಅಡಂತ್ಯಾಯ ಅವರು ಸಮರ್ಥವಾಗಿ ವಾದ ಮಂಡಿಸಿದ್ದರು.

Post a Comment

0 Comments

ಜಾಹೀರಾತು

Responsive Advertisement