Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಉಡುಪಿ ಜಿಲ್ಲಾಸ್ಪತ್ರೆಯ ಶೌಚಾಲಯದಲ್ಲಿ ಯುವಕ ಆತ್ಮಹತ್ಯೆ: ಹಲವರ ವಿರುದ್ಧ ಪ್ರಕರಣ ದಾಖಲು

ಉಡುಪಿ: ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ಮನೆಯವರಿಂದ ಹಲ್ಲೆಗೊಳಗಾಗಿ ಉಡುಪಿಯ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕನೊಬ್ಬ ಆಸ್ಪತ್ರೆಯ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ. 30ರಂದು ಸಂಜೆ ನಡೆದಿದೆ. ಮೃತನನ್ನು ನಾಯರ್‌ಕೋಡಿ ನಿವಾಸಿ ಹಾಗೂ ಹಿಂದೂ ಜಾಗರಣ ವೇದಿಕೆಯ ನಾಯರ್‌ಕೋಡಿ ಘಟಕದ ಕಾರ್ಯಕರ್ತ ಪ್ರದೀಪ್ ಪೂಜಾರಿ ಎಂದು ಗುರುತಿಸಲಾಗಿದೆ.

ಪ್ರದೀಪ್ ಕಳೆದ ಏಳು ವರ್ಷಗಳಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಇತ್ತೀಚೆಗೆ ಯುವತಿ ಪ್ರೀತಿಯನ್ನು ನಿರಾಕರಿಸಿದ್ದ ಹಿನ್ನೆಲೆಯಲ್ಲಿ ಇಬ್ಬರ ನಡುವೆ ಭಿನ್ನಾಭಿಪ್ರಾಯ ಉಂಟಾಗಿತ್ತು. ಈ ಹಿಂದೆ 2025ರಲ್ಲಿ ಯುವತಿಯನ್ನು ಅಡ್ಡಗಟ್ಟಿ ಗಲಾಟೆ ನಡೆಸಿದ ಆರೋಪದ ಮೇಲೆ ಪ್ರದೀಪ್ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಆತ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದನು.

ಅ. 27ರಂದು ರಾತ್ರಿ ಮನೆಗೆ ತೆರಳುತ್ತಿದ್ದ ಪ್ರದೀಪ್‌ನನ್ನು ಯುವತಿಯ ಸಹೋದರರು ಹಾಗೂ ಇತರರು ಮೂರು ಕಾರುಗಳಲ್ಲಿ ಬಂದು ಬಲವಂತವಾಗಿ ಯುವತಿಯ ಮನೆಗೆ ಕರೆದೊಯ್ದು ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಬೆತ್ತ ಹಾಗೂ ಮರದ ದೊಣ್ಣೆಗಳಿಂದ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಲಾಗಿದೆ ಎನ್ನಲಾಗಿದೆ. ಈ ವೇಳೆ ಪ್ರದೀಪ್‌ನ ಸ್ನೇಹಿತರು ಸ್ಥಳಕ್ಕೆ ತೆರಳಿದಾಗಲೂ ಹಲ್ಲೆ ನಡೆಯುತ್ತಿತ್ತು ಎಂದು ತಿಳಿದುಬಂದಿದೆ.

ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿದ್ದ ಪ್ರದೀಪ್‌ನನ್ನು ಅ. 28ರಂದು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ತನ್ನ ಮೇಲಾದ ಹಲ್ಲೆ ಹಾಗೂ ಜೀವ ಬೆದರಿಕೆಯ ಬಗ್ಗೆ ಸಹೋದರನ ಬಳಿ ನೋವು ತೋಡಿಕೊಂಡಿದ್ದ ಎನ್ನಲಾಗಿದೆ. ಅ. 30ರಂದು ಸಂಜೆ ಸುಮಾರು 5.30ರ ವೇಳೆಗೆ ಆಸ್ಪತ್ರೆಯ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪ್ರದೀಪ್‌ನ ಸಹೋದರ ನೀಡಿದ ದೂರಿನ ಮೇರೆಗೆ ಯುವತಿ ಶ್ರಾವ್ಯ ಶೆಟ್ಟಿ, ಆಕೆಯ ಸಹೋದರರಾದ ಪ್ರಸನ್ನ ಶೆಟ್ಟಿ, ಸುಧೀರ್ ಶೆಟ್ಟಿ, ಶೈಲೇಶ್ ಶೆಟ್ಟಿ ಸೇರಿದಂತೆ ಸನತ್, ಕೃಷ್ಣ, ಸುಜಯ್, ಶಶಾಂಕ್ ಹಾಗೂ ಹೊರರಾಜ್ಯದ ಇಬ್ಬರು ಕಾರ್ಮಿಕರು ಸೇರಿದಂತೆ ಹತ್ತಕ್ಕೂ ಹೆಚ್ಚು ಮಂದಿಯ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆ ತಿಳಿದು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಹಾಗೂ ಸ್ಥಳೀಯರು ಉಡುಪಿ ನಗರ ಪೊಲೀಸ್ ಠಾಣೆಯ ಮುಂದೆ ಜಮಾಯಿಸಿ, ಯುವಕನ ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

Post a Comment

0 Comments

ಜಾಹೀರಾತು

Responsive Advertisement