ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯ ಇಂಡುವಾಳು ಗ್ರಾಮದ ಬಳಿ ಜಲ್ಲಿ ತುಂಬಿದ್ದ ಟಿಪ್ಪರ್‌ಗೆ ಥಾರ್ ವಾಹನ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕೇರಳ ಮೂಲದ ಯುವಕ ಹಾಗೂ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಮುಂಜಾನೆ ನಡೆದಿದೆ. ಅಪಘಾತದಲ್ಲಿ ಮತ್ತೋರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೇರಳ ಮೂಲದ ಲಿಫೈಲ್ ಹಾಗೂ ಸ್ವಪ್ನ ಮೃತಪಟ್ಟವರು. ಗಂಭೀರವಾಗಿ ಗಾಯಗೊಂಡ ಬಾಸಿಲ್ ಮಹಮದ್ ಅಲಿ ಅವರನ್ನು ಮಂಡ್ಯದ ಮಿಮ್ಸ್ (MIMS) ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೈಸೂರಿನಿಂದ ಬೆಂಗಳೂರಿನ ಕಡೆಗೆ ಮೂವರು ಥಾರ್ ವಾಹನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಇಂಡುವಾಳು ಸಮೀಪದ ಹೆದ್ದಾರಿ ಎಕ್ಸಿಟ್ ಬಳಿ ಆರ್‌ಟಿಒ ಅಧಿಕಾರಿಗಳು ವಾಹನ ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಜಲ್ಲಿ ತುಂಬಿಕೊಂಡು ಬರುತ್ತಿದ್ದ ಟಿಪ್ಪರ್‌ಗಳನ್ನು ತಡೆದಿದ್ದರು ಎನ್ನಲಾಗಿದೆ. ಈ ವೇಳೆ ಒಂದು ಟಿಪ್ಪರ್ ನಿಲ್ಲಿಸದೆ ಮುಂದೆ ಸಾಗಿದ್ದು, ಅದನ್ನು ಅಧಿಕಾರಿಗಳು ತಮ್ಮ ವಾಹನದಲ್ಲಿ ಬೆನ್ನಟ್ಟಿ ತಡೆದಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಆರ್‌ಟಿಒ ಅಧಿಕಾರಿಗಳು ಟಿಪ್ಪರ್‌ಗೆ ಅಡ್ಡಲಾಗಿ ವಾಹನ ನಿಲ್ಲಿಸಲು ಯತ್ನಿಸಿದಾಗ ಗಾಬರಿಗೊಂಡ ಚಾಲಕ ಹೆದ್ದಾರಿಯಲ್ಲೇ ಹಠಾತ್ ಬ್ರೇಕ್ ಹಾಕಿದ್ದಾನೆ ಎನ್ನಲಾಗಿದೆ. ಈ ವೇಳೆ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಥಾರ್ ಚಾಲಕನಿಗೆ ವಾಹನ ನಿಯಂತ್ರಿಸಲು ಸಾಧ್ಯವಾಗದೆ ಟಿಪ್ಪರ್‌ಗೆ ರಭಸವಾಗಿ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ತೀವ್ರತೆಗೆ ಥಾರ್ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ.
ಘಟನೆಯ ಬೆನ್ನಲ್ಲೇ ಸ್ಥಳದಲ್ಲಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಆರ್‌ಟಿಒ ಅಧಿಕಾರಿಗಳ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎಂಬ ಆರೋಪ ಕೇಳಿಬಂದಿದೆ. ಹೆದ್ದಾರಿಯಲ್ಲಿ ವಾಹನಗಳನ್ನು ಬೆನ್ನಟ್ಟಿ ಹಠಾತ್ತನೆ ತಡೆಯುವ ಕ್ರಮ ಅಪಾಯಕಾರಿ ಎಂದು ಸ್ಥಳೀಯರು ಆಕ್ಷೇಪಿಸಿದ್ದಾರೆ.
ಸ್ಥಳಕ್ಕೆ ಮಂಡ್ಯ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ನಿಖರ ಕಾರಣ ತಿಳಿಯಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

0 Comments