Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಹಿಂದೂ ಸಂಘಟನೆ ಕಾರ್ಯಕರ್ತ ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ: ಆರೋಪಿಗಳ ಶೀಘ್ರ ಬಂಧನಕ್ಕೆ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಒತ್ತಾಯ

ಉಡುಪಿ: ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಪೆರ್ಡೂರು ನಿವಾಸಿ ಪ್ರದೀಪ್ ಪೂಜಾರಿ ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೃತ ಪ್ರದೀಪ್ ಪೂಜಾರಿಗೆ ನ್ಯಾಯ ಒದಗಿಸುವಂತೆ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಆಗ್ರಹಿಸಿದೆ.

ಈ ಹಿನ್ನೆಲೆಯಲ್ಲಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ಜಿಲ್ಲಾಧ್ಯಕ್ಷ ಪ್ರವೀಣ್ ಎಂ. ಪೂಜಾರಿ ಅವರ ನೇತೃತ್ವದಲ್ಲಿ ಬನ್ನಂಜೆಯ ನಾರಾಯಣ ಗುರು ಸಭಾಭವನದಲ್ಲಿ ವಿಶೇಷ ಸಭೆ ನಡೆಯಿತು. ಸಭೆಯಲ್ಲಿ ಬಿಲ್ಲವ ಸಮುದಾಯದ ಮುಖಂಡರು ಹಾಗೂ ಮೃತ ಪ್ರದೀಪ್ ಪೂಜಾರಿ ಅವರ ಕುಟುಂಬಸ್ಥರು ಭಾಗವಹಿಸಿ ಪ್ರಕರಣದ ಕುರಿತು ಚರ್ಚಿಸಿದರು.

ಸಭೆಯ ಬಳಿಕ ನಿಯೋಗವು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿತು. ಪ್ರಕರಣದ ಕುರಿತು ನಿಷ್ಪಕ್ಷಪಾತ ಹಾಗೂ ಸಮಗ್ರ ತನಿಖೆ ನಡೆಸಬೇಕು. ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಶೀಘ್ರ ಬಂಧಿಸಬೇಕು. ತನಿಖೆಗಾಗಿ ವಿಶೇಷ ಪೊಲೀಸ್ ತಂಡವನ್ನು ರಚಿಸಿ ಕಾರ್ಯಾಚರಣೆ ನಡೆಸಬೇಕು ಎಂದು ಒತ್ತಾಯಿಸಲಾಯಿತು.

ಅಲ್ಲದೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯ ಲೋಪವಾಗಿದೆಯೇ ಎಂಬ ಬಗ್ಗೆಯೂ ತನಿಖೆ ನಡೆಸಬೇಕು. ಸಂತ್ರಸ್ತರ ದೂರನ್ನು ಸ್ವೀಕರಿಸದಿರುವ ಆರೋಪದ ಹಿನ್ನೆಲೆಯಲ್ಲಿ ಹಿರಿಯಡ್ಕ ಪೊಲೀಸ್ ಠಾಣೆಯ ಠಾಣಾಧಿಕಾರಿ ಹಾಗೂ ಸಿಬ್ಬಂದಿಯನ್ನು ತನಿಖೆಗೆ ಒಳಪಡಿಸಬೇಕು. ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿರುವ ಪೊಲೀಸರ ವಿರುದ್ಧವೂ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಪ್ರಕರಣದ ತನಿಖೆಯಲ್ಲಿ ನಿರ್ಲಕ್ಷ್ಯ ಮುಂದುವರಿದರೆ ಜಿಲ್ಲೆಯಾದ್ಯಂತ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಲ್ಲವ ಯುವ ವೇದಿಕೆ ಎಚ್ಚರಿಕೆ ನೀಡಿದೆ.

ಇದೇ ವೇಳೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಅವರನ್ನೂ ನಿಯೋಗ ಭೇಟಿಯಾಗಿ ಮನವಿ ಸಲ್ಲಿಸಿತು. ಪ್ರಕರಣದಲ್ಲಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ಸಚಿವರು ನೀಡಿದ್ದಾರೆ ಎಂದು ತಿಳಿದುಬಂದಿದೆ.

Post a Comment

0 Comments

ಜಾಹೀರಾತು

Responsive Advertisement